ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಹಣ
ಕ.ಪ್ರವಾರ್ತೆ, ನರಸಿಂಹರಾಜಪುರ, ಮಾ.4
ಪಟ್ಟಣಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಣ್ಣ ಹಾಗೂ ಮಧ್ಯಮ ಪಟ್ಟಣ ಅಭಿವೃದ್ಧಿ, ರೋಜ್ಗಾರ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ನೀಡಿದ್ದರೂ ರಾಜ್ಯ ಸರ್ಕಾರ ಈ ಯೋಜನೆಯನ್ನು ತನ್ನ ಅನುದಾನ ಎಂದೇ ಬಿಂಬಿಸುತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ ರಾಜ್ಯ ಸರ್ಕಾರವನ್ನು ಟೀಕಿಸಿದರು. ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬಂದಿದ್ದರೂ ನಿವೇಶನರಹಿತರಿಗೆ ಒಂದೂ ನಿವೇಶನ ನೀಡಲು ಸಾಧ್ಯವಾಗಿಲ್ಲ, ಮನೆಗಳನ್ನು ನೀಡಿಲ್ಲ. ಬಿಪಿಎಲ್ ಪಡಿತರ ಚೀಟಿಯ ವಿತರಣೆಯಲ್ಲಿ ಸ್ವಜನ ಪಕ್ಷಪಾತ ನೀತಿ ಅನುಸರಿಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬರುವಾಗ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಎಂದು ವಾಗ್ದಾನ ಮಾಡಿತ್ತು. ಆದರೆ, ಅದು ಈಡೇರಲಿಲ್ಲ. 1 ಯೂನಿಟ್ ವಿದ್ಯುತ್ಗೆ ರು. 13 ನೀಡಿ ಬೇರೆ ರಾಜ್ಯದಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ 6 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿತ್ತು. ಇದು ಬಿಜೆಪಿ ಸರ್ಕಾರದ ವೈಫಲ್ಯ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ಕಾಂಗ್ರೆಸ್ ಮುಖಂಡರಾದ ಸಚಿನ್ ಮೀಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಎ. ಅಬೂಬಕರ್ ಉಪಸ್ಥಿತರಿದ್ದರು.
ಶಾಸಕ ಸುರೇಶ್ ಬಿರುಸಿನ ಪ್ರಚಾರ
ಕ.ಪ್ರ ವಾರ್ತೆ ತರೀಕೆರೆ, ಮಾ.4
ಕರ್ನಾಟಕ ಜನತಾ ಪಕ್ಷದ ಜಿಲ್ಲಾಧ್ಯಕ್ಷ, ಶಾಸಕ ಡಿ.ಎಸ್. ಸುರೇಶ್ ಪುರಸಭೆ ಸದಸ್ಯರ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸೋಮವಾರ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನೆಡೆಸಿ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತಯಾಚಿಸಿದರು. ಪಕ್ಷದ ಚುನಾವಣಾ ಅಭ್ಯರ್ಥಿಗಳು, ಪಕ್ಷದ ಮುಖಂಡರಾದ ಬಿ.ಆರ್. ರವಿ, ಡಿ.ಆರ್. ಗುರುಮೂರ್ತಿ, ಮಂಜುನಾಥ್, ಡಿ.ಎಸ್. ಗಿರೀಶ್, ಶಿವಕುಮಾರ್, ಪಕ್ಷದ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಶಾಸಕ ಡಿ.ಎಸ್. ಸುರೇಶ್ ಮಾತನಾಡಿ, ಮತದಾರರು ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿ ಪಕ್ಷ ಅಧಿಕಾರಕ್ಕೆ ಬರುವುದು ಖಂಡಿತ ಎಂದರು.
ಜೆಡಿಎಸ್ ಪ್ರಚಾರ
ಮೂಡಿಗೆರೆ: ಪಟ್ಟಣ ಪಂಚಾಯಿತಿ ಚುನಾವಣೆ ರಂಗೇರಿದ್ದು, ರಾಜಕೀಯ ಮುಖಂಡರು ಅಭ್ಯರ್ಥಿಗಳ ಪರ ಮತಯಾಚನೆ ನಡೆಸುತ್ತಿದ್ದಾರೆ. 11ನೇ ವಾರ್ಡ್ನಲ್ಲಿ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ವಿಜೇಂದ್ರ ಅವರ ಪರ ರಾಜ್ಯ ಸಮಿತಿ ಸದಸ್ಯ ಎಂ.ಎಸ್. ಬಾಲಕೃಷ್ಣ, ಬಿ.ಎಂ. ಬೈರೇಗೌಡ, ಕ್ಷೇತ್ರಾಧ್ಯಕ್ಷ ಡಿ.ಆರ್. ಉಮಾಪತಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ ಯಾಚಿಸಿದರು.