ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತಹಸೀಲ್ದಾರ್ ವರ್ಗಾವಣೆಗೆ ಒತ್ತಾಯ

Lingaraj Badiger
Updated On : 5 Mar 2013, 10:43 am

ಕಪ್ರ ವಾರ್ತೆ, ಚಿಕ್ಕಮಗಳೂರು, ಮಾ. 4
ಮತದಾರರ ಪಟ್ಟಿಯಲ್ಲಿ ಕೆಲವು ಲೋಪದೋಷಗಳಾಗಿದ್ದು, ಇದಕ್ಕೆ  ಕಾರಣಕರ್ತರಾದ ಚಿಕ್ಕಮಗಳೂರು ತಹಸೀಲ್ದಾರ್ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಕಚೇರಿ ಎದುರು  ತಹಸೀಲ್ದಾರ್ ಪ್ರತಿಕೃತಿ ದಹನ ಮಾಡಿದರು.
ಪ್ರಜಾಪ್ರಭುತ್ವದ ಕಗ್ಗೊಲೆ: ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್ ಅವರಿಗೆ ಮನವಿಯನ್ನು ಸಲ್ಲಿಸಿ, ನಗರದ 9, 11, 12, 14 ಹಾಗೂ 15 ವಾರ್ಡ್‌ಗಳು ಸೇರಿದಂತೆ ಇತರೆ ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಯಲ್ಲಿ ಇರುವ ಹೆಸರುಗಳನ್ನು ಬೇರೆ ವಾರ್ಡ್‌ಗಳ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇದಕ್ಕೆ ನೇರ ಹೊಣೆಗಾರರು ತಹಸೀಲ್ದಾರ್ ಅವರು, ಆಡಳಿತ  ಪಕ್ಷದೊಂದಿಗೆ ಶಾಮೀಲಾಗಿ ಈ ಕೆಲಸ ಮಾಡಿದ್ದಾರೆ. ಇದು, ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.
ಈ ಲೋಪದೋಷವನ್ನು ಕೂಡಲೇ ಸರಿಪಡಿಸಿ ಮುಕ್ತ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು  ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್ ಹಾಗೂ ನಗರಸಭೆಗೆ ಸ್ಪರ್ಧೆ ಮಾಡಿರುವ ಜೆಡಿಎಸ್ ಅಭ್ಯರ್ಥಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರತಿಭಟನೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎಲ್. ಭೋಜೇಗೌಡ, ಮತದಾರರ ಪಟ್ಟಿಯಲ್ಲಿ ಲೋಪದೋಷವಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸೇರಿಕೊಂಡು ತಹಸೀಲ್ದಾರ್ ಅವರು ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ವಾರ್ಡ್‌ಗಳಲ್ಲಿ ಮತದಾರರ ಹೆಸರನ್ನು ಕೈ ಬಿಡಲಾಗಿದೆ. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.
ಕೆಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಲೋಕೇಶ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಹಸೀಲ್ದಾರ್ ವೀಣಾ ಹಾಗೂ ಶಾಸಕರ ಆಪ್ತ ಸಹಾಯಕರಾದ ಚಟ್ನಳ್ಳಿ ಮಹೇಶ್ ಅವರನ್ನು ವರ್ಗಾವಣೆ ಮಾಡಬೇಕು ಎಂದು  ಅವರು ಇದೇ ವೇಳೆ ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement