ಶಂಕುಸ್ಥಾಪನೆ ಇಂದು
ಚಿಕ್ಕಮಗಳೂರು: ನಗರಕ್ಕೆ ನೂತನವಾಗಿ ಮಂಜೂರಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಆಲ್ದೂರು ಪಟ್ಟಣಕ್ಕೆ ಮಂಜೂರಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡಗಳ ಶಂಕುಸ್ಥಾಪನಾ ಸಮಾರಂಭವನ್ನು ಮಾ.15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಆರ್. ಅಶೋಕ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಡಿ.ಹೆಚ್. ಶಂಕರಮೂರ್ತಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಅರವಿಂದ್ ಲಿಂಬಾವಳಿ, ಸಮಾಜ ಕಲ್ಯಾಣ ಮತ್ತು ಬಂದಿಖಾನೆ ಸಚಿವ ಎ. ನಾರಾಯಣಸ್ವಾಮಿ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾಗವಹಿಸಲಿದ್ದಾರೆ.
ವಿಶ್ವ ಗ್ರಾಹಕರ ದಿನಾಚರಣೆ
ಚಿಕ್ಕಮಗಳೂರು: ಜಿಲ್ಲಾಡಳಿತ, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಗ್ರಾಹಕರ ವೇದಿಕೆ ಸಂಯುಕ್ತಾಶ್ರಯದಲ್ಲಿ ವಿಶ್ವಗ್ರಾಹಕರ ದಿನಾಚರಣೆ ಮಾ. 15 ರಂದು ಮಧ್ಯಾಹ್ನ 12.30ಕ್ಕೆ ನಗರದ ವಾರ್ತಾ ಭವನದಲ್ಲಿ ನಡೆಯಲಿದೆ. ಜಿಲ್ಲಾ ಗ್ರಾಹಕರ ವೇದಿಕೆ ಸದಸ್ಯ ಹೆಚ್.ಎಸ್. ರುದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ವಿ. ಯಶವಂತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹೊಂದಾಣಿಕೆ ಮುಖ್ಯ
ಶೃಂಗೇರಿ: ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ತನ್ನ ಕರ್ತವ್ಯದ ಅವಧಿಯಲ್ಲಿ ವ್ಯಕ್ತಿಗತ ಹೊಂದಾಣಿಕೆಯ ಮನೋಭಾವ ಅಳವಡಿಸಿಕೊಂಡಾಗ ಮಾತ್ರ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದು ಸಿಪಿಐ ಸಂಗಮನಾಥ ಹಿರೇಮಠ ಅಭಿಪ್ರಾಯಪಟ್ಟರು. ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭಧ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಠಾಣಾಧಿಕಾರಿ ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶೃಂಗೇರಿಯಿಂದ ದಾವಣಗೆರೆಗೆ ವರ್ಗಾವಣೆಗೊಂಡ ಹೆಡ್ ಕಾನ್ಸ್‌ಟೇಬಲ್ ಅರುಣ್ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ಚೇತನ್ ಸ್ವಾಗತಿಸಿದರು. ಮೋಹನ್ ನಿರೂಪಿಸಿ ಪ್ರದೀಪ್ ವಂದಿಸಿದರು.