ಕಡೂರು- ಚಿಕ್ಕಮಗಳೂರು ಚತುಷ್ಪಥರಸ್ತೆ
ಕ.ಪ್ರ ವಾರ್ತೆ, ಸಖರಾಯಪಟ್ಟಣ, ಮಾ. 15
ಕಡೂರು- ಚಿಕ್ಕಮಗಳೂರು ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಸಖರಾಯಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ಶಂಕುಸ್ಥಾಪನೆ ಹಾಗೂ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಚತುಷ್ಪಥ ರಸ್ತೆ ನಿರ್ಮಾಣದ ಸಂಬಂಧ ಸಮಗ್ರ ಯೋಜನಾ ವರದಿ (ಡಿ.ಪಿ.ಆರ್.) ತಯಾರಿಸಲು ಈಗಾಗಲೇ ಸೂಚಿಸಲಾಗಿದೆ. ಇದರಿಂದ ಎರಡೂ ಪಟ್ಟಣಗಳ ನಡುವೆ ಸಂಚಾರ ವ್ಯವಸ್ಥೆ ಇನ್ನಷ್ಟು ಸುಗಮವಾಗಲಿದೆ ಎಂದರು.
ಕಳೆದ 4 ವರ್ಷಗಳಲ್ಲಿ ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯ ಅಭಿವೃದ್ಧಿಗೆ 90 ಕೋಟಿ ಖರ್ಚು ಮಾಡಲಾಗಿದೆ. ಇಲ್ಲಿನ 4 ಕಾಲುವೆಗಳ ಲೈನಿಂಗನ್ನು ಕಾಂಕ್ರಿಟೀಕರಣಗೊಳಿಸಲಾಗಿದೆ. ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ 2.5 ಕೋಟಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಸಖರಾಯಪಟ್ಟಣದಲ್ಲಿ ಸುಸಜ್ಜಿತ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಸ್ಥಾಪಿಸಲಾಗುವುದು ಎಂದು ಹೇಳಿದರು.
ಸುಮಾರು 1.25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಖರಾಯಪಟ್ಟಣ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಾಲಿನಿಬಾಯಿ, ಜಿಲ್ಲಾ ಪಂಚಾಯತ್ ಸದಸ್ಯ ಕಲ್ಮರುಡಪ್ಪ ಉಪಸ್ಥಿತರಿದ್ದರು. ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಕೆ. ಹಳ್ಳಿ ಸ್ವಾಗತಿಸಿದರು, ಜಾವಗಲ್ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.