ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಯಲಿ

Lingaraj Badiger
Updated On : 18 Mar 2013, 10:45 am

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಕಡೂರು ಮತ್ತು ತರೀಕೆರೆ ತಾಲೂಕುಗಳಲ್ಲಿ ಬರ ಪರಿಹಾರ ಯೋಜನೆಯಡಿ ಕೈಗೊಳ್ಳಲಾಗಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ಸಮಗ್ರವಾಗಿ ಪರಿಶೀಲನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಖುದ್ದು ಪರಿಶೀಲನೆ ಮಾಡಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಬರ ಪರಿಹಾರ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿಯೊಂದು ಕಾಮಗಾರಿಗಳನ್ನು ಉಪ ವಿಭಾಗಾಧಿಕಾರಿ ಮತ್ತು ತಹಸೀಲ್ದಾರರು ಗಂಭೀರವಾಗಿ ಪರಿಗಣಿಸಿ, ಖುದ್ದು ಪರಿಶೀಲನೆ ಮಾಡಿದ ಬಳಿಕ ಕಾಮಗಾರಿಗಳ ಬಿಲ್ಲು ಪಾವತಿ ಮಾಡಬೇಕು ಎಂದು ಸಚಿವರು ಸೂಚಿಸಿದರು.
ಪೂರ್ಣವಾಗಿ ಬಳಸಬೇಕು: ಕಡೂರು ತಾಲೂಕಿನಲ್ಲಿ ಎಷ್ಟು ಬೋರ್‌ವೆಲ್‌ಗಳನ್ನು ಬರ ಪರಿಹಾರ ಕಾಮಗಾರಿಯಲ್ಲಿ ಕೊರೆಸಲಾಗಿದೆ ಎಂಬುದನ್ನು ಪರಿಶೀಲನೆ ನಡೆಸುವಂತೆ ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಿದ ಅವರು, ಇನ್ನೂ ಹೆಚ್ಚಿನ ಕಾಮಗಾರಿಗಳು ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು. ಬರ ಪರಿಹಾರಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ, ಪೂರ್ಣವಾಗಿ ಬಳಸಬೇಕು. ಹಣ ಬಳಕೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು. ಆಗಿರುವ ಕಾಮಗಾರಿಗಳ ಬಿಲ್ ಪಾವತಿಯನ್ನು ವಿಳಂಭವಿಲ್ಲದೆ ನೀಡಬೇಕು.  ಬೋರ್‌ವೆಲ್‌ಗಳು ವಿಫಲವಾದರೆ ಅವುಗಳಲ್ಲಿಡಲಾದ ಮೋಟಾರ್‌ಗಳನ್ನು ತೆಗೆಯಬೇಕು. ಅಲ್ಲದೆ, ವಿಫಲ ಬೋರ್‌ವೆಲ್‌ಗಳನ್ನು ಶೀಘ್ರವಾಗಿ ಮುಚ್ಚಬೇಕು. ಮುಚ್ಚದೇ ಏನಾದರೂ ದುರಂತಗಳು ನಡೆದ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಲಾಗುವುದು ಎಂದು ಹೇಳಿದರು.
 ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸರ್ವೀಸಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸುವಂತೆ ಸಚಿವ ಜೀವರಾಜ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.
 ಜಿಲ್ಲಾಧಿಕಾರಿ ವಿ. ಯಶವಂತ್ ಮಾತನಾಡಿ, ಬರ ಪರಿಹಾರ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಗೆ ಇದುವರೆಗೆ 16.91 ಕೋಟಿ ರು. ಬಿಡುಗಡೆಯಾಗಿದೆ. ಇದರಲ್ಲಿ ಕುಡಿಯುವ ನೀರಿನ ಯೋಜನೆ ಮತ್ತು ಜಾನುವಾರು ತೊಟ್ಟಿ ನಿರ್ಮಾಣಕ್ಕೆ 6.40 ಕೋಟಿ ರು., ಗೋಶಾಲೆ ನಿರ್ವಹಣೆಗೆ 75 ಲಕ್ಷ ರು.,
 ಮೇವು ಖರೀದಿಗೆ 20 ಲಕ್ಷ ರು. ಖರ್ಚು ಮಾಡಲಾಗಿದೆ. ತಾಲೂಕುವಾರು ಕಡೂರು ತಾಲೂಕಿಗೆ- 682 ಲಕ್ಷ ರು, ಚಿಕ್ಕಮಗಳೂರು- 49 ಲಕ್ಷ ರು., ತರೀಕೆರೆ- 76 ಲಕ್ಷ ರು., ಮೂಡಿಗೆರೆ ತಾಲೂಕಿಗೆ 57 ಲಕ್ಷ ರು. ಬಿಡುಗಡೆಯಾಗಿದೆ ಎಂದು ಹೇಳಿದರು.
 ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement