ಹೋರಾಟದ ಮನೋಭಾವ ಬೆಳೆಸಿಕೊಳ್ಳಿ
ಕಪ್ರ ವಾರ್ತೆ, ಚಿಕ್ಕಮಗಳೂರು, ಮಾ, 17
ಯುವ ಜನತೆ ವಿದ್ಯಾರ್ಥಿ ಜೀವನದಲ್ಲಿ ಹೋರಾಟದ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಗೆ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಮುಂದಾಗಬೇಕೆಂದು ಬಿಜಾಪುರ ಮತ್ತು ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನಿರ್ಬಯಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.
ನಗರದ ಕುವೆಂಪು ಕಲಾಮಂದಿರದಲ್ಲಿ ರಾಮಕೃಷ್ಣ ವಿವೇಕಾನಂದ ಆಶ್ರಮ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನೋತ್ಸವದ ಅಂಗವಾಗಿ ಇತ್ತೀಚೆಗೆ ನಡೆದ ಯುವ ಸಮ್ಮೇಳನವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಅಣ್ಣಾ ಹಜಾರೆ ಅವರು ತಮ್ಮ 27ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಆಲೋಚಿಸಿದ್ದರು. ಆ ಸಮಯದಲ್ಲಿ ಸ್ವಾಮಿ ವಿವೇಕಾನಂದರ ಜೀವಗಾಥೆಯ ಬಗ್ಗೆ ಅಧ್ಯಯನ ನಡೆಸಿ ತಮ್ಮ ಮನಸ್ಸನ್ನು ಪರಿವರ್ತಿಸಿಕೊಂಡು ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಟ ಆರಂಭಿಸಿದರು.
ಸಂಚಲನ: ಮಹಾತ್ಮ ಗಾಂಧೀಜಿ ನಂತರ ಶಾಂತಿಯುತ ಹೋರಾಟದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿ ಅಣ್ಣಾ ಹಜಾರೆ ಅವರು ಜಗತ್ತೇ ಹಿಂತಿರುಗಿ ನೋಡುವಂತೆ ಹೋರಾಟ ರೂಪಿಸಿದ್ದಾರೆ. ಇಂದಿನ ವಿದ್ಯಾರ್ಥಿಗಳು ಇಂತಹ ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಬೆಂಗಳೂರಿನ ರಾಮಕೃಷ್ಣ ಯೋಗಾಶ್ರವುದ ಯೋಗೇಶ್ವರಾನಂದಜೀ ಮಹಾರಾಜ್, ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ, ಬೆಂಗಳೂರು ರಾಮಕೃಷ್ಣ ಆಶ್ರಮದ ಶಾಂತಾನಂ ಸರಸ್ವತಿ ಸ್ವಾಮೀಜಿ ಹಾಗೂ ಬೆಂಗಳೂರಿನ ಯಲಹಂಕದ ರಾಮಕೃಷ್ಣ ವಿವೇಕಾನಂದ ವೇದಾಂತಾಶ್ರಮದ ಸ್ವಾಮಿ ಅಭಯಾನಂದಜೀ ಮಹಾರಾಜ್ ಇದ್ದರು. ಸಮಾಜ ಸೇವಕ ಪಿ. ಸುದೀಶ್ ಕುಮಾರ್ರನ್ನು ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸನ್ಮಾನಿಸಿದರು.