ಅಸ್ತಿತ್ವ ಉಳಿಯಲು ರಾಜಕೀಯವಾಗಿ ಬೆಳೆಯಿರಿ: ಡಾ. ಸುಬ್ರಮಣ್ಯ
ಕಪ್ರವಾರ್ತೆ,ಚಿಕ್ಕಮಗಳೂರು,ಮಾ.18
ಬ್ರಾಹ್ಮಣ ಸಮುದಾಯ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯವಾಗಿ ಬೆಳೆಯುವ ಅಗತ್ಯವಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಾ. ಬಿ.ಎನ್.ವಿ. ಸುಬ್ರಮಣ್ಯ ಹೇಳಿದ್ದಾರೆ.
ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಹಿನ್ನೆಲೆಯಲ್ಲಿ ನಗರದ ಶ್ರೀ ರಂಗಣ್ಣನವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಭಾನುವಾರ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
ಶಕ್ತಿ ಪ್ರದರ್ಶಿಸಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ದೇಶದಲ್ಲಿ ಬ್ರಾಹ್ಮಣ ಸಮುದಾಯದ ಅಸ್ಥಿತ್ವಕ್ಕೆ ಕೊಡಲಿ ಪೆಟ್ಟು ಬೀಳಲಾರಂಭಿಸಿದೆ ಎಂದ ಅವರು, ಇದನ್ನು ತಪ್ಪಿಕೊಂಡು ಜನಾಂಗ ಮುಂದೆ ಬರಬೇಕಾದರೆ ಅದು ತನ್ನ ರಾಜಕೀಯ ಶಕ್ತಿಯನ್ನು ಎಲ್ಲಾ ಪಕ್ಷಗಳಿಗೆ ತೋರಿಸಬೇಕಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಬ್ರಾಹ್ಮಣರು ತಮ್ಮ ಸಮುದಾಯದ ಅಭ್ಯರ್ಥಿಗಳು ಯಾವುದೇ ಪಕ್ಷದಿಂದ ಸ್ಪರ್ಧಿಸಿದ್ದರೂ ಪಕ್ಷವನ್ನು ಗಣನೆಗೆ ತೆಗೆದುಕೊಳ್ಳದೇ ತಮ್ಮ ಸಮುದಾಯದವರಿಗೆ ಮತ ಹಾಕುವ ಕೆಲಸ ಮಾಡಬೇಕು. ತಮ್ಮ ಮತದ ಶಕ್ತಿಯನ್ನು ರಾಜಕೀಯ ಪಕ್ಷಗಳಿಗೆ ಪ್ರದರ್ಶಿಸಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ಶ್ರೀಧರ್, ಸಮುದಾಯದ ಯುವಜನತೆ ಹಿರಿಯರ ಮಾರ್ಗದರ್ಶನದೊಂದಿಗೆ ಮುಂಬರುವ ದಿನಗಳಲ್ಲಿ ನಡೆಯಬೇಕು. ಸಂಸ್ಕಾರ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ತಮ್ಮ ಬದುಕಿನಲ್ಲಿ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಡಿ.ಹೆಚ್. ನಟರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ದಿವಾಕರ್ ಜೋಷಿ, ಜಿಲ್ಲಾ ಕಾರ್ಯದರ್ಶಿ ವಿಷ್ಣುವರ್ಧನ್, ಸಹ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕರಾದ ವಿಜಯಲಕ್ಷ್ಮೀ ಸ್ವಾಗತಿಸಿದರು. ಶಂಕರನಾರಾಯಣ ಭಟ್ ವಂದಿಸಿದರು.