ಕೃಷ್ಣ, ಡಿಕೆಶಿ ಮೂಲೆಗುಂಪಿಗೆ ವ್ಯವಸ್ಥಿತ ಸಂಚು: ಡಿಸಿಎಂ
ಕ.ಪ್ರ ವಾರ್ತೆ ಅರಸೀಕೆರೆ ಮಾ. 19
ಕಾಂಗ್ರೆಸ್ನ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ಬೆಂಬಲಿಗರನ್ನು ಟಿಕೆಟ್ ಹಂಚಿಕೆ ಸಮಿತಿಯಿಂದ ಹೊರಗಿಡುವ ಮೂಲಕ ವ್ಯವಸ್ಥಿತವಾಗಿ ಅವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆದಿದೆ. ಇದರಿಂದ ಕಾಂಗ್ರೆಸ್ನಲ್ಲಿ ಸಾಕಷ್ಟು ಗೊಂದಲ, ಭಿನ್ನಾಭಿಪ್ರಾಯ ಉಂಟಾಗಿದೆ. ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲೂ ಭಾರೀ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲೂ ಕಾಂಗ್ರೆಸ್ ನಾಯಕರು ಭಾರಿ ಭ್ರಷ್ಟಾಚಾರ ಎಸಗಿದ್ದಾರೆ. ತಮ್ಮ ಪಕ್ಷದಲ್ಲಿ ಇರುವ ಗೊಂದಲ, ಭಿನ್ನಾಭಿಪ್ರಾಯ ಬಗೆ ಹರಿಸಿಕೊಳ್ಳಲಾಗದ ಕಾಂಗ್ರೆಸಿಗರು ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ರಾಜ್ಯಾಧ್ಯಕ್ಷರ ಹುದ್ದೆಗೆ ಸಂಬಂಧಿಸಿದಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಿರುವುದಾಗಿ ಘೋಷಿಸಿದರು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಮಾತನಾಡುವ ಕೇಂದ್ರ ಮಂತ್ರಿ ವೀರಪ್ಪಮೊಯ್ಲಿ ಮೊದಲು ತಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಐಟಿಸಿ ಹಗರಣದ ಬಗ್ಗೆ ಆಲೋಚಿಸಲಿ. ಕಾರ್ಪೋರೇಟ್ ಸಚಿವರಾಗಿದ್ದ ವೇಳೆ ತಮ್ಮ ಪುತ್ರನ ನಿಯಂತ್ರಣದಲ್ಲಿರುವ ಟ್ರಸ್ಟ್ನ ಕಾರ್ಯಗಳಿಗೆ ಅಕ್ರಮವಾಗಿ ಕೋಟ್ಯಂತರ ರುಪಾಯಿ ದೇಣಿಗೆ ಪಡೆದು ಕೊಂಡಿರುವುದು ದಾಖಲೆಗಳಿಂದ ಸಾಬೀತಾಗಿದೆ. ಆದರೆ ಅವರು ತಮ್ಮ ವಿರುದ್ಧದ ಆರೋಪಗಳನ್ನು ಮರೆತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅವರಿಗೆ ನೈತಿಕ ಹಕ್ಕಿಲ್ಲವೆಂದು ಕಿಡಿಕಾರಿದರು. ರಾಜ್ಯಾದ್ಯಂತ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದು ಜನ, ಜಾನುವಾರುಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಸಂಕಷ್ಟ ಪರಿಹಾರದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾಧಿಕಾರಿಗೆ ಒಂದು ಕೋಟಿ ರು. ವಿಶೇಷ ಅನುದಾನ ನೀಡಲಾಗಿದೆ. ಆದರೆ ಕೇಂದ್ರ ಬರ ಪರಿಹಾರದ ನಿಟ್ಟಿನಲ್ಲಿ ಅಗತ್ಯ ನೆರವು ನೀಡಿಲ್ಲ ಎಂದು ದೂರಿದರು. ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ಹೊಸಪಕ್ಷ ಕಟ್ಟಿ ಮೂರನೇ ಮಹಡಿ ಕನಸು ಕಾಣುತ್ತಿದ್ದವರಿಗೆ ತಕ್ಕ ಉತ್ತರ ನೀಡಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪನವರನ್ನು ಟೀಕಿಸಿದರು. ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿಯೂ ಸನ್ನದ್ಧವಾಗಿದ್ದು, 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಈಗಾಗಲೇ ಶೆಟ್ಟರ್ ಅವರನ್ನು ಸಿಎಂ ಅಭ್ಯರ್ಥಿಯೆಂದು ಘೋಷಿಸಲಾಗಿದೆ ಎಂದರು. ನವಿಲೆ ಅಣ್ಣಪ್ಪ, ಕೃಷ್ಣೇಗೌಡ, ಕಾಟೀಕೆರೆ ಪ್ರಸನ್ನಕುಮಾರ್, ಹಾರ್ನಳ್ಳಿ ಸಿದ್ದಪ್ಪ, ಎಪಿಎಂಸಿ ಸದಸ್ಯ ಡಿ.ಬಿ.ಗಂಗಾಧರ್ ಇನ್ನಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.