ಸಿಎಂ ಭಾಗವಹಿಸಬೇಕಾಗಿದ್ದ ಕಾರ್ಯಕ್ರಮಗಳು ರದ್ದು
ಕ.ಪ್ರ.ವಾರ್ತೆ,ನ.ರಾ. ಪುರ, ಮಾ.20
ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಗುರುವಾರ ಕೊಪ್ಪದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭಾಗವಹಿಸಬೇಕಾಗಿದ್ದ ಸರ್ಕಾರಿ ಕಾರ್ಯಕ್ರಮ ರದ್ದಾಗಿದ್ದು ಶುಕ್ರವಾರ ಕೊಪ್ಪದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ.ಎಸ್. ಗಣೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಮುಖ್ಯಮಂತ್ರಿಗಳು ಗುರುವಾರ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ. ಆದರೆ, ಮಾ.22ರ ಶುಕ್ರವಾರ ಮುಖ್ಯಮಂತ್ರಿ ಶೆಟ್ಟರ್ ಕೊಪ್ಪಕ್ಕೆ ಆಗಮಿಸಲಿದ್ದು ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಈಶ್ವರಪ್ಪ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಸಚಿವ ರವಿ, ಸಚಿವ ಜೀವರಾಜ್ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಖಂಡನೆ: ಬುಧವಾರ ಕೊಪ್ಪದಲ್ಲಿ ನಡೆಯಬೇಕಾಗಿದ್ದ ಸಮಾವೇಶಕ್ಕೆ ಕಾಂಗ್ರೆಸ್ ಮುಖಂಡರು ನೀತಿ ಸಂಹಿತೆ ಹೆಸರಿನಲ್ಲಿ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ತಂದು ಕಾರ್ಯಕ್ರಮ ರದ್ದಾಗುವಂತೆ ಮಾಡಿದ್ದಾರೆ. ಇದನ್ನು ತಾಲೂಕು ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.