ನೀತಿ ಸಂಹಿತೆ : ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ಕ.ಪ್ರವಾರ್ತೆ,ಚಿಕ್ಕಮಗಳೂರು, ಮಾ.21
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ. ಯಶವಂತ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯಲ್ಲೂ ಸರ್ವಸನ್ನದ್ಧವಾಗಬೇಕಿದೆ. ಚುನಾವಣಾ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಯಾವುದೇ ರೀತಿಯ ಅಧಿಕೃತ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಹೇಳಿದರು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪ್ರಚಾರ, ಸಭೆ, ಮೆರವಣಿಗೆಗಳ ವೀಡಿಯೋ ಚಿತ್ರೀಕರಣ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕಾತಿಯಾಗಲಿದೆ ಎಂದು ಹೇಳಿದರು.
ಶಿಸ್ತುಕ್ರಮ: ಯಾವುದೇ ಸರಕಾರಿ ನೌಕರರು ರಾಜಕೀಯ ಕಾರ್ಯದಲ್ಲಿ ತೊಡಗಿರುವುದು ಕಂಡುಬಂದರೆ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ರಾಜಕೀಯ ಸಭೆ, ಕಾರ್ಯಕ್ರಮಗಳಿಗೆ ವಿವಿಧ ಇಲಾಖೆಗಳ ಅನುಮತಿಯನ್ನು ಒಂದೇ ಕಡೆ ದೊರಕಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಈ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹೆಚ್ಚಿಸಲು ಮತ್ತು ಮತದಾನ ಪ್ರಮಾಣ ಅಧಿಕಗೊಳಿಸಲು ಜಾಗೃತಿ ಮೂಡಿಸಲು ವ್ಯವಸ್ಥಿತ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಇದಕ್ಕೆ ವಿವಿಧ ಇಲಾಖೆಗಳನ್ನು ಹಾಗೂ ಸರ್ಕಾರೇತರ ಸಂಘಟನೆಗಳ ನೆರವನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ, ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್ ಉಪಸ್ಥಿತರಿದ್ದರು.