ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು
ಚಿಕ್ಕಮಗಳೂರು: ಸರ್ಕಾರಿ ನೌಕರರು ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಹೇಳಿದ್ದಾರೆ.
ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಕ್ರೀಡಾ ಮನೋಭಾವ ತಮ್ಮ ದೈನಂದಿನ ಕೆಲಸಗಳಲ್ಲಿ ಅಳವಡಿಸಿಕೊಂಡರೆ ದಕ್ಷತೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಮಂಜುನಾಥ್ ಸ್ವಾಮಿ ಮಾತನಾಡಿ, ನಿತ್ಯ ಕೆಲಸದ ಒತ್ತಡದಲ್ಲಿ ಸಾರ್ವಜನಿಕ ಸೇವೆಗೆ ತೊಡಗಿರುವ ನೌಕರರು ಮನಸ್ಸಿನ ಜಂಜಾಟದಿಂದ ದೂರಾಗಲು ಈ ಕ್ರೀಡೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಜಿಲ್ಲಾಧಿಕಾರಿ ವಿ. ಯಶವಂತ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿಭಾಗೀಯ ಉಪಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಎಂ.ಎಸ್. ಹೇಮಂತ್ ಕುಮಾರ್, ಲೋಕೇಶಪ್ಪ, ರಾಜು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸಿ.ಕೆ. ಉಷಾದೇವಿ ಹಾಜರಿದ್ದರು.