ಗೃಹ ಬಂಧನ ಪ್ರಕರಣ ತನಿಖೆಗೆ ಕಾಂಗ್ರೆಸ್, ಬಿಜೆಪಿ ಆಗ್ರಹ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮೇ 2-
ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡರ ಗೃಹ ಬಂಧನ ಪ್ರಕರಣ ಕುರಿತಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿವೆ.
ಇದರ ಜತೆಗೆ ಎರಡೂ ಪಕ್ಷಗಳು ಪೊಲೀಸ್ ಇಲಾಖೆಯ ಮೇಲೆ ಗೂಬೆ ಕೂರಿಸಿವೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಎರಡು ಪಕ್ಷಗಳು ಗುರುವಾರದಂದು ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿವೆ.
ಸಚಿವ ಸಿ.ಟಿ. ರವಿ ಅವರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರು ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಆರೋಪಿಸಿದ್ದಾರೆ.
ಆಣೆ ಮಾಡಲಿ: ಬುಧವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಇದು, ಶುದ್ಧ ಸುಳ್ಳು. ಇದನ್ನು ಸತ್ಯವಾಗಿದ್ದರೆ ಧರ್ಮಸ್ಥಳದಲ್ಲಿ ಆಣೆ ಮಾಡಲು ಗಾಯತ್ರಿ ಶಾಂತೇಗೌಡ ಅವರು ಬರಲಿ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರು ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿ.ಟಿ. ರವಿ ಕುಮ್ಮಕ್ಕಿನಿಂದ ಈ ಘಟನೆ ನಡೆದಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನ್ಯಾಯ ಕೇಳಲು ಹೋದ ನಮ್ಮ ಪಕ್ಷದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕೆಲವು ಪೊಲೀಸರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸಿದ್ದಾರೆ. ಒಂದೇ ಸಮುದಾಯಕ್ಕೆ ಸೇರಿದವರನ್ನು ಗುರಿಯಾಗಿಟ್ಟುಕೊಂಡು ಈ ಕೃತ್ಯ ಎಸಗಲಾಗಿದೆ. ಇದು, ನಮಗೆ ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದರು.
ಪ್ರತಿಭಟನೆ
ಕಾಂಗ್ರೆಸ್ ಧರಣಿ: ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.
ಪ್ರತಿಭಟನಾಕಾರರು ಸಚಿವ ಸಿ.ಟಿ. ರವಿ ವಿರುದ್ಧ ಘೋಷಣೆ ಹಾಕಿದರು. ನವೀನ್, ಎಎಸ್‌ಎಸ್ ಆರಾಧ್ಯ, ಉಪ್ಪಳ್ಳಿ ಲೋಕೇಶ್, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಗಾಯತ್ರಿಗೆ ಜಾಮೀನು
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರನ್ನು ಗೃಹ ಬಂಧನದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಮೂವರಿಗೆ ಚಿಕ್ಕಮಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಜಾಮೀನಿನ ಬಿಡುಗಡೆ ಮಾಡಿದೆ.
ಬುಧವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ನಗರಸಭಾ ಸದಸ್ಯ ಕಾಯಿ ರವಿ, ಅನಿಲ್ ಹಾಗೂ ಸುಂದರೇಶ್‌ಗೌಡ ಅವರನ್ನು ಬಸವನಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.