ಅತ್ಯಾಚಾರಿಗೆ 7 ವರ್ಷ ಜೈಲು, 15 ಸಾವಿರ ದಂಡ
ಚಿಕ್ಕಮಗಳೂರು: ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕಳೆದ ಆರು ತಿಂಗಳ ಹಿಂದೆ ಕಡೂರಿನ ಬಂಜೇನಹಳ್ಳಿ ಗ್ರಾಮದ ಅಡ್ಡೇರಿ ಹಾನಗಲ್ಲು ಹತ್ತಿರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ನಾಗರಾಜನು ಪಿರ್ಯಾಧಿ ದನಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿ, ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ವಸ್ತ್ರಮಠ ಅವರು, ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ನಾಗರಾಜನಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಕೆ.ಕೆ. ಕುಲಕರ್ಣಿ ವಾದ ಮಂಡಿಸಿದ್ದರು.
ಬಾಲಕಿಯ ಅಪಹರಣ: ಆರೋಪಿಗೆ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಅಪಹರಿಸಿದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2010 ಆಗಸ್ಟ್ 26 ರಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶಾಲೆಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಲಕ್ಕವಳ್ಳಿಯ ಸರ್ಕಾರಿ ಆಸ್ಪತ್ರೆ ಎದುರು 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಖಲಂದರ್ ಮದುವೆಯಾಗಲು ಒತ್ತಾಯಿಸಿ ಅವಳನ್ನು ಪುಸಲಾಯಿಸಿ ಮಾರುತಿ ವ್ಯಾನ್‌ನಲ್ಲಿ ಬಲತ್ಕಾರವಾಗಿ ಅಪಹರಣ ಮಾಡಿದ ಹಿನ್ನೆಲೆಯಲ್ಲಿ ಲಕ್ಕವಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ವಸ್ತ್ರಮಠ ಅವರು, ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಖಲಂದರ್ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರುಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಕೆ.ಕೆ. ಕುಲಕರ್ಣಿ ವಾದ ಮಂಡಿಸಿದ್ದರು.