ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಮಾಡಲು ಆಗ್ರಹ
ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಕಾರಣರಾಗಿರುವುದರಿಂದ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಎಂ. ಮಲ್ಲೇಶ್ ಒತ್ತಾಯಿಸಿದ್ದಾರೆ.
ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷವನ್ನು ಸಂಘಟಿಸುವಲ್ಲಿ ಪರಮೇಶ್ವರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ದಲಿತರ ಆಶಾಕಿರಣವಾಗಿರುವ ಈ ಇಬ್ಬರು ಮುಖಂಡರು ರಾಜ್ಯದ ಮುಖ್ಯ ಮಂತ್ರಿಯಾಗುತ್ತಾರೆಂಬ ಕಾರಣದಿಂದ ಚುನಾವಣೆಯಲ್ಲಿ ಪಕ್ಷವನ್ನು ದಲಿತರು ಮತ್ತು ಇತರರು ಬೆಂಬಲಿಸಿದ್ದಾರೆ. ಹಲವು ದಶಕಗಳಿಂದ ಪಕ್ಷದ ಸಂಘಟನೆಗಾಗಿ ದುಡಿದಿರುವ ಈ ಇಬ್ಬರು ನಾಯಕರಲ್ಲಿ ಒಬ್ಬರನ್ನು ಮುಖ್ಯ ಮಂತ್ರಿಯನ್ನಾಗಿ ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿ ದಲಿತರಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೆ, ಹೈಕಮಾಂಡ್ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿತು. ಅದನ್ನು ಘಟಕ ಸ್ವಾಗತಿಸುತ್ತದೆ. ಜತೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಮತ್ತು ಶೋಷಿತರನ್ನು ಸಾಲದಿಂದ ಮುಕ್ತರನ್ನಾಗಿಸಲು ತೆಗೆದುಕೊಂಡಿರುವ ಕ್ರಮ ಕ್ರಾಂತಿಕಾರಕವಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ನಿಗಮದಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಿರುವುದು ದಲಿತರು, ಬಡವರು, ಶೋಷಿತರು ನೆಮ್ಮದಿ ನಿಟ್ಟುಸಿರು ಬಿಡುವಂತಾಗಿದೆ. ಸಿದ್ಧರಾಮಯ್ಯ ಅವರ ಕ್ರಮವನ್ನು ಘಟಕ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.
ದಕ್ಷ ಮತ್ತು ಸ್ವಾಭಿಮಾನಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿರುವ ಸಂಪುಟದಲ್ಲಿ ಡಾ.ಜಿ. ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂಬುದು ಘಟಕದ ಒತ್ತಾಯವಾಗಿದೆ. ಕಾಂಗ್ರೆಸ್ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಉಳಿಸುವ ಮೂಲಕ ಉಪ ಮುಖ್ಯ ಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.