ಸಿದ್ದು ಸಂಪುಟದಲ್ಲಿ ಜಿಲ್ಲೆಗೆ ಸಿಗದ ಪ್ರಾತಿನಿಧ್ಯ
ಕಪ್ರವಾರ್ತೆ,ಚಿಕ್ಕಮಗಳೂರು,ಮೇ18
ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ ಜನ್ಮ ನೀಡಿದ್ದ ಚಿಕ್ಕಮಗಳೂರು ಜಿಲ್ಲೆಯನ್ನು ಸಿದ್ದು ಸಂಪುಟದಲ್ಲಿ ಕಡೆಗಣಿಸಲಾಗಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಕಾಫಿಯ ತವರೂರು ಕಾಂಗ್ರೆಸ್ ಪಾಲಿಗೆ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲದಂತಾಗಿದೆ.
ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಳೆದ ಏಪ್ರಿಲ್ 27 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಚಿಕ್ಕಮಗಳೂರು ಜಿಲ್ಲಾ ಕೇಂದ್ರಕ್ಕೆ ಬಂದು ಅಭ್ಯರ್ಥಿಗಳ ಪರ ಭಾಷಣ ಮಾಡುವ ಆರಂಭದಲ್ಲಿ ಅತ್ತೆಯವರಿಗೆ ರಾಜಕೀಯ ಪುನರ್ ಜನ್ಮ ನೀಡಿರುವ ಈ ಜಿಲ್ಲೆಯನ್ನು ಕಾಂಗ್ರೆಸ್ ಪಕ್ಷ ಯಾವತ್ತೂ ಮರೆಯುವುದಿಲ್ಲ. ಈ ಜಿಲ್ಲೆಗೆ ನಮ್ಮ ಹೃದಯದಲ್ಲಿ ಸ್ಥಾನ ನೀಡಲಾಗಿದೆ ಎಂದು ಹೇಳುವ ಮೂಲಕ ಇಂದಿರಾಗಾಂಧಿಯವರನ್ನು ನೆನಪು ಮಾಡಿಕೊಂಡಿದ್ದರು.
ಜಿಲ್ಲೆ ಕಡೆಗಣನೆ: ಆದರೆ, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಹಾಗಾದರೆ, ಇಲ್ಲಿರುವ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರಿಗೆ, ಕಾಂಗ್ರೆಸ್‌ನ ಶಾಸಕರಿಗೆ ಅರ್ಹತೆ ಇಲ್ಲವೆ ಎಂಬ ಪ್ರಶ್ನೆ ಜನರ ಮುಂದೆ ಎದುರಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ವಿಧಾನಪರಿಷತ್ ಸದಸ್ಯರು ಹಾಗೂ ಓರ್ವರು ಶಾಸಕರು ಇದ್ದಾರೆ. ಈ ಪೈಕಿ ಮೋಟಮ್ಮ ಒಬ್ಬರು. ಅವರು ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ನಂತರದಲ್ಲಿ ವಿಧಾನಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದರು. ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಮೋಟಮ್ಮ ಅವರ ಕನಸಿಗೆ ಕಾಂಗ್ರೆಸ್ ತಣ್ಣಿರು ಎರಚಿದೆ. ಇದರಿಂದಾಗಿ ಮೋಟಮ್ಮ ಅವರು ಜಿಲ್ಲಾ ಕಾಂಗ್ರೆಸ್ ಮುಖಂಡರ ವಿರುದ್ಧ ಗರಂ ಆಗಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ನಾಯಕರು ತಮಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರ ಗುಂಪೊಂದು ಇತ್ತೀಚೆಗೆ ಬೆಂಗಳೂರಿಗೆ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ತಮ್ಮ ವಿರುದ್ಧ ಇಲ್ಲಸಲ್ಲದ ದೂರು ನೀಡಿದ್ದಾರೆ ಎಂದು ಕನ್ನಡಪ್ರಭದೊಂದಿಗೆ ಮಾತನಾಡುವಾಗ ಮೋಟಮ್ಮ ಆರೋಪಿಸಿದರು.
ಜಿಲ್ಲೆಯ ಅಭಿವೃದ್ಧಿ: ತಮಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಟರಿಗೆ ಒತ್ತಾಯಿಸಿರಲಿಲ್ಲ. ಮೋಟಮ್ಮ ಅವರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಯಾವುದೇ ವಿಧಾನಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡಿಲ್ಲ ಎಂದು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕು ಎಂದು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಸಿಗದಿದ್ದರೂ ಕೂಡ ತರೀಕೆರೆ ಕ್ಷೇತ್ರ ಸೇರಿದಂತೆ ಜಿಲ್ಲೆಗೆ ಸರ್ಕಾರದಿಂದ ವಿವಿಧ ಯೋಜನೆಯಡಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಉಸ್ತುವಾರಿ: ಹೊಸದಾಗಿ ಸಂಪುಟಕ್ಕೆ ಸೇರಿರುವ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಬ್ದಾರಿಯನ್ನು ನೀಡಲಾಗುವುದು. ಅದುದರಿಂದ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಜವಬ್ದಾರಿ ಬೇರೆ ಜಿಲ್ಲೆಯ ಸಚಿವರ ಹೆಗಲಿಗೆ ಬೀಳಲಿದೆ.
ಇದು, ಚಿಕ್ಕಮಗಳೂರು ಜಿಲ್ಲೆಯ ಪಾಲಿಗೆ ಶಾಪ ಎಂದರೆ ತಪ್ಪಾಗಲಾರದು. ಕಳೆದ ಒಂದು ದಶಕದ ರಾಜ್ಯ ರಾಜಕಾರಣ ನೋಡಿದರೆ ಒಂಭತ್ತುವರೆ ವರ್ಷಗಳ ಕಾಲ ಬೇರೆ ಜಿಲ್ಲೆಯವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
2004ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ಬಳಿಕ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಇದ್ದಾಗ, ನಂತರದಲ್ಲಿ 2008ರಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೂ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿರಲಿಲ್ಲ. ಜಗದೀಶ್ ಶೆಟ್ಟರ್ ಮಂತ್ರಿ ಮಂಡಲದಲ್ಲಿ ಮಾತ್ರ ಚಿಕ್ಕಮಗಳೂರು ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ನೀಡಲಾಯಿತು. ಬೇರೆಯವರೇ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.
ಸಚಿವ ಸ್ಥಾನ: ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ಬೇರೆ ಪಕ್ಷದ ಶಾಸಕರೋರ್ವರು ಕನ್ನಡಪ್ರಭದೊಂದಿಗೆ ಮಾತನಾಡುವಾಗ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.