ಲೋಕಸಭೆ ಚುನಾವಣಾ ಮೈತ್ರಿಗೆ ಕೆಜೆಪಿ ಸಿದ್ಧ
ಶಿವಮೊಗ್ಗ: ಸದ್ಯವೇ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷವು ಸಮಾನಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. ಇನ್ನೂ 15 ದಿನಗಳಲ್ಲಿ ಯಾರೊಂದಿಗೆ ಮೈತ್ರಿ ಎಂಬುದು ಗೊತ್ತಾಗಲಿದೆ.
ನಗರದಲ್ಲಿ ಶನಿವಾರ ಕೆಜೆಪಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಲೋಕಸಭೆ ಚುನಾವಣೆಯಲ್ಲಿ ಕೆಜೆಪಿ ಬೇರೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನತೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಬರುವ ಲೋಕಸಭೆ ಚುನಾವಣೆಯಲ್ಲಿ ಕೆಜೆಪಿ ಬೇರೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಲ್ಲಿ ಮಾತ್ರ ಪಕ್ಷ ನಿರೀಕ್ಷಿಸಿದ್ದ 15-20 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದರು.
ಅಧಿವೇಶನದ ನಂತರ ತೀರ್ಮಾನ: ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರ್ಚೆ ನಡೆಸುತ್ತಿವೆ. ಇತರೆ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸುತ್ತಿದ್ದೇನೆ. ವಿಧಾನಸಭೆ ಅಧಿವೇಶನ ಮುಗಿದ ನಂತರ ಮೈತ್ರಿ ಕುರಿತ ತೀರ್ಮಾನ ಪ್ರಕಟಿಸಲಾಗುವುದು ಎಂದರು.
ಈ ಸಂಬಂಧ ಇನ್ನು 15 ದಿನದೊಳಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ, ಯಾವ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಡರೆ ರಾಜ್ಯಕ್ಕೆ ಹಿತ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಕೆಜೆಪಿ ಪ್ರಭಾವ ಬೀರಬಹುದು ಎಂದು ದೃಢ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಉಡುಪಿ ಕೃಷ್ಣಮಠ ಹಾಗೂ ಗೋಕರ್ಣ ದೇವಾಲಯಗಳನ್ನು ಸರ್ಕಾರ ಮರುವಶಕ್ಕೆ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಹೊಸದಾಗಿ ಬಂದಿರುವ ಮುಖ್ಯಮಂತ್ರಿಗಳು ತುಂಬಾ ಉತ್ಸಾಹದಲ್ಲಿದ್ದಾರೆ. ಆದರೆ ಜನರಲ್ಲಿ ಗೊಂದಲವನ್ನುಂಟು ಮಾಡುವ ಪ್ರಯತ್ನ ಮಾಡಬಾರದು ಎಂದು ವಿನಯದಿಂದ ಕೇಳಿಕೊಳ್ಳುತ್ತೇನೆ ಎಂದರು.