ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರಾಜ್ಯದಲ್ಲಿ ನಕ್ಸಲ್ ಸಮಸ್ಯೆ: ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ

Lingaraj Badiger
Updated On : 27 May 2013, 11:00 am

ಕ.ಪ್ರ.ವಾರ್ತೆ,ಚಿಕ್ಕಮಗಳೂರು,ಮೇ26
ರಾಜ್ಯದಲ್ಲಿರುವ ನಕ್ಸಲ್ ಸಮಸ್ಯೆ ಬಗ್ಗೆ ಸೋಮವಾರ ನಡೆಯಲಿರುವ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
 ನಕ್ಸಲ್ ಪೀಡಿತ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಲಿದೆ. ಅಲ್ಲಿನ ಜನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
 ನಮ್ಮ ದೇಶದಲ್ಲಿರುವುದು ಪ್ರಜಾಪ್ರಭುತ್ವ ಸರ್ಕಾರ. ಯಾರೇ ಆಗಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಸಂವಿಧಾನದ ವಿರುದ್ಧವಾಗಿ, ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಆ ಕೆಲಸ ಯಾರೂ ಕೂಡ ಮಾಡಬಾರದು. ಸಮಸ್ಯೆಗಳು ಇದ್ದರೆ ಅವುಗಳಿಗೆ ಚರ್ಚೆ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕರ ಪ್ರೋತ್ಸಾಹ ಅಗತ್ಯ: ನಕ್ಸಲ್ ಸಮಸ್ಯೆಯನ್ನು ಬಗೆಹರಿಸುವುದು ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಜನಸಾಮಾನ್ಯರೂ ಈ ಕೆಲಸಕ್ಕೆ ಕೈಜೋಡಿಸಬೇಕು ಎಂದ ಅವರು, ನಕ್ಸಲ್ ಸಮಸ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯ ನಿರ್ವಹಿಸುತ್ತಿದೆ. ಈ ಬಗ್ಗೆ ಈ ಪ್ರದೇಶಗಳ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಮಾಹಿತಿ ಇದೆ. ಸೋಮವಾರ ಹಾಗೂ ಮಂಗಳವಾರ ಗೃಹ ಇಲಾಖೆ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ನಕ್ಸಲರ ಶರಣಾಗತಿ ಪ್ಯಾಕೇಜ್ ಬಗ್ಗೆ ಕೇಳಿದ ಪ್ರಶ್ನೆಗೆ ಈ ಕುರಿತು ಪರಿಶೀಲಿಸಿ, ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಶೀಘ್ರ ಸಿಬ್ಬಂದಿ ನೇಮಕ: ನಕ್ಸಲ್ ನಿಗ್ರಹ ಪಡೆ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಕೊರತೆ ಹಾಗೂ ವೇತನದಲ್ಲಿ ತಾರತಮ್ಯದ ಬಗ್ಗೆ ಕೇಳಿದಾಗ, ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ರಾಜ್ಯ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗುವುದು. ಹಣಕಾಸು ಇಲಾಖೆಯಲ್ಲಿರುವ ಕಡತ ವಿಲೇವಾರಿಯಾದ ಬಳಿಕ ವೇತನದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಎಎನ್‌ಎಫ್ ಹಾಗೂ ಪೊಲೀಸ್ ಇಲಾಖೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಆರು ಕೋಟಿ ಜನತೆಗೆ ಸೂಕ್ತ ಭದ್ರತೆಯನ್ನು ಕಲ್ಪಿಸುವ ಹೊಣೆಯೂ ಈ ಇಲಾಖೆಯ ಮೇಲಿದೆ. ಇಲಾಖೆಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಅಧಿಕಾರಿಗಳ ಪ್ರತ್ಯೇಕ ಸಭೆಯೊಂದನ್ನು ಕರೆಯುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement