ಶಾಸಕ ಜೀವರಾಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ
ಚಿಕ್ಕಮಗಳೂರು: ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ನೇತೃತ್ವದಲ್ಲಿ ಇಲ್ಲಿನ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಶಾಸಕ ಜೀವರಾಜ್ ಅವರ ಪ್ರತಿಕೃತಿಯನ್ನು ದಹನ ಮಾಡಲಾಯಿತು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ತರೀಕೆರೆ ಶಾಸಕ ಶ್ರೀನಿವಾಸ್, ಮುಖಂಡರಾದ ಸಂದೀಪ್ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ವೇಳೆಗೆ ಜೀವರಾಜ್ ವಿರುದ್ಧ ಘೋಷಣೆ ಕೂಗಿದರು.
ಬಂಧಿಸದಿದ್ದರೆ ಹೋರಾಟ ತೀವ್ರ: ಬಳಿಕ ಜಿಲ್ಲಾ ರಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕ ಜೀವರಾಜ್ ನಡೆಸಿರುವ ಅತ್ಯಾಚಾರ ಹೀನಾಯ ಹಾಗೂ ಮಹಿಳೆಯರು ತಲೆ ತಗ್ಗಿಸುವ ಪ್ರಕರಣ ಇದಾಗಿದೆ.
ಶಾಸಕ ಜೀವರಾಜ್ ಹಾಗೂ ಅವರ ಬೆಂಬಲಿಗರಾದ ಆಶಿಶ್ಕುಮಾರ್, ನಾಗರಾಜ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದೆ ಹೋದರೆ ಜಿಲ್ಲೆಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.
ಅವರು ರಾಜಿನಾಮೆ ನೀಡದೆ ಹೋದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಹೋರಾಟವನ್ನು ಚುರುಕುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.