ಸದ್ಯದಲ್ಲೇ ಕಾಮಗಾರಿ ಆರಂಭ: ಡಿಸಿ
ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಂಬಂಧಿತ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ವಾರದೊಳಗೆ ಕಾಮಗಾರಿ ಆರಂಭಗೊಳ್ಳಲಿದೆ. ಮಳೆಗಾಲದೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ನಗರೋತ್ಥಾನ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿಸಿದ ಬಳಿಕ ಕೆಎಂಆರ್ಪಿ ಸೇರಿದಂತೆ ಇತರೆ ಯೋಜನೆಯಡಿ ಯಾವುದಾದರೂ ರಸ್ತೆ ಕಾಮಗಾರಿಯನ್ನು ತೆಗೆದುಕೊಂಡಿದ್ದರೆ, ಅವುಗಳನ್ನು ಪತ್ತೆ ಹಚ್ಚುವಂತೆ ಇಲಾಖೆಯ ಯೋಜನಾ ಸಮಾಲೋಚಕರಿಗೆ ಸೂಚನೆ ನೀಡಲಾಗಿದ್ದು, 20 ದಿನಗಳೊಳಗೆ ವರದಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಯನ್ನು ಕರೆದು, ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಯ್ದುಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.