22ಕ್ಕೆ ಕಾಫಿ ಬೆಳೆಗಾರರ ಸಮ್ಮೇಳನ
ಚಿಕ್ಕಮಗಳೂರು: ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ನ.22 ರಂದು ಕಾಫಿ ಬೆಳೆಗಾರರ ಸಮ್ಮೇಳನ ಹಾಗೂ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಿದೆ.
ಅಂದು ಬೆಳಿಗ್ಗೆ 10.30ಕ್ಕೆ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. 11 ಗಂಟೆಗೆ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಎಂ. ವೀರಪ್ಪ ಮೊಯ್ಲಿ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಕೆಜಿಎಫ್ ಅಧ್ಯಕ್ಷ ಡಾ. ಎನ್.ಕೆ. ಪ್ರದೀಪ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭಾಗವಹಿಸಲಿದ್ದಾರೆ. ಸಮ್ಮೇಳನದ ಅಂಗವಾಗಿ ಹೊರ ತರಲಾಗುತ್ತಿರುವ ಕಾಫಿ ಬೆಳೆಗಾರರ ಸ್ಥಿತಿಗತಿ, ಕಾಫಿ ಸಾಗಲಿ ಮುಂದೆ ಹಾಗೂ ಸ್ಮರಣಾ ಸಂಚಿಕೆಯನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.
ಸಮಸ್ಯೆಗಳ ಚರ್ಚೆ: ಪ್ರಸಕ್ತ ಕಾಫಿ ಬೆಳೆಗಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒತ್ತುವರಿ, ಕಾಡಾನೆ ಹಾವಳಿ, ಗೊಬ್ಬರದ ಬೆಲೆ ಏರಿಕೆ, ಪರಿಸರ ಸೇವೆಗಳು ಕೋಮಾರ್ಕ್ ಪುನಶ್ಚೇತನಕ್ಕೆ ಹಣ ಬಿಡುಗಡೆ, ಭೂ ಸುಧಾರಣೆ ತಿದ್ದುಪಡಿ, ಉದ್ಯಮೆ ಬೆಳೆಗಾರರ ಸಾಲ ಮನ್ನಾ ಹೀಗೆ ಹಲವು ವಿಷಯಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಪಶ್ಚಿಮಘಟ್ಟವನ್ನು ವಿಶ್ವಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಿರುವುದು ಇಲ್ಲಿನ ಸ್ಥಳೀಯರು ಮತ್ತು ರೈತರು, ಬೆಳೆಗಾರರಲ್ಲಿ ಆತಂಕವನ್ನುಂಟು ಮಾಡಿದೆ. ಈ ನಿರ್ಧಾರವನ್ನು ತೆಗೆದುಕೊಳ್ಳುವಾಗ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸದೆ ಏಕಾಏಕಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸಿ, ಸರ್ಕಾರ ಸ್ಥಳೀಯ ರೈತ, ಬೆಳೆಗಾರರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ ಅವರು, ಇದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸರ್ಕಾರ ಚರ್ಚಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಜಿಎಫ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಟಿ. ಮೋಹನ್ಕುಮಾರ್, ಎಂ.ಎಸ್. ಲಿಂಗಪ್ಪಗೌಡ, ವಸಂತೇಗೌಡ ಹಾಗೂ ಡಿ.ಎಂ. ವಿಜಯ್ ಉಪಸ್ಥಿತರಿದ್ದರು.