ರೇಲ್ವೆ ಮಾರ್ಗ ಕಾಂಗ್ರೆಸ್, ಬಿಜೆಪಿ ಸಾಧನೆ ಎಂಬಂತೆ ಬೀಗುತ್ತಿವೆ: ದೇವರಾಜು ಟೀಕೆ
ಕ.ಪ್ರ.ವಾರ್ತ್ಣೆ ಚಿಕ್ಕಮಗಳೂರು ನ.19
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಜಿಲ್ಲೆಯ ರೈತರ ಹಾಗೂ ಕಾಫಿ ಬೆಳೆಗಾರರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಜೆಡಿಎಸ್ ಮುಖಂಡ ಎಚ್.ಎಚ್. ದೇವರಾಜ್ ಆಗ್ರಹಿಸಿದ್ದಾರೆ.
ಮಳೆಯಿಂದಾಗಿ ಕಾಫಿ, ಮೆಣಸು, ಅಡಕೆ ಸಂಪೂರ್ಣವಾಗಿ ಹಾಳಾಗಿದ್ದು, ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬಯಲುಸೀಮೆಯಲ್ಲಿ ಆಲೂಗಡ್ಡೆ, ತೆಂಗಿನ ಬೆಳೆಗಳಿಗೂ ಹಾನಿ ಸಂಭವಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ನಿರ್ದೇಶನ ನೀಡಬೇಕು: ಜಿಲ್ಲೆಯಲ್ಲಿ ಒತ್ತುವರಿ ತೆರವು ಪ್ರಕ್ರಿಯೆ ಜನರಲ್ಲಿ ಆತಂಕ ಉಂಟು ಮಾಡಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಿ ಗಡಿ ಗುರುತು ಮಾಡುವವರೆಗೆ ಯಾವುದೇ ಒತ್ತುವರಿಯನ್ನು ತೆರವುಗೊಳಿಸಬಾರದು. ಈ ಸಂಬಂಧ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಸರ್ಕಾರ ಇದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಬೇಕು ಹಾಗೂ ಆಡಳಿತ ಯಂತ್ರವನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ತನ್ನ ಪಕ್ಷದ ಕಾರ್ಯಕ್ರಮ ಎಂಬಂತೆ ಪ್ರತಿಬಿಂಬಿಸುತ್ತಿದೆ. ಕಾಮಗಾರಿಗೆ ಹಣ ಬಿಡುಗಡೆಯಾದ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ತಮ್ಮ ಸಾಧನೆಗಳೆಂದು ಬೆನ್ನು ತಟ್ಟಿಕೊಳ್ಳುತ್ತಿವೆ. ಈ ಕಾಮಗಾರಿಗೆ ಜೆಡಿಎಸ್ ಪಕ್ಷದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕೊಡುಗೆ ಇದೆ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ಹೇಳಿದರು.