ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜೇಷ್ಠತಾ ನಿಯಮ ಗೊಂದಲ ಸರಿಪಡಿಸಿ

Vishwanath S
Updated On : 24 Nov 2013, 3:04 am

ಚಿಕ್ಕಮಗಳೂರು: ರಾಜ್ಯ ಅಂಗವಿಕಲ ಸರ್ಕಾರಿ ನೌಕರರಿಗೆ ಅನುಸರಿಸುತ್ತಿರುವ ಜೇಷ್ಠತಾ ನಿಯಮವನ್ನು ಬಡ್ತಿಯಲ್ಲಿ ನೀಡುವ ನಿಟ್ಟಿನಲ್ಲಿರುವ ಆದೇಶಗಳ ಗೊಂದಲವನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು ಎಂದು ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಆಗ್ರಹಿಸಿದ್ದಾರೆ.
ಸರ್ಕಾರ ಎಸ್ಸಿ ಮತ್ತು ಎಸ್ಟಿ ಸರ್ಕಾರಿ ನೌಕರರಿಗೆ ಸೇವಾ ಜೇಷ್ಠತೆ ಆಧರಿಸಿ ಬಡ್ತಿಯಲ್ಲಿ ಮೀಸಲಾತಿ ನೀಡುತ್ತಿದ್ದು, ಅದೇ ರೀತಿಯಲ್ಲಿ ಸರ್ಕಾರಿ ಅಂಗವಿಕಲ ನೌಕರರಿಗೂ ಮೀಸಲಾತಿ ಕಲ್ಪಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ಶನಿವಾರ ಒತ್ತಾಯಿಸಿದರು.
ಅಂಗವಿಕಲ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವುದರ ಜೊತೆಗೆ ಸಾಮಾಜಿಕ ನ್ಯಾಯವನ್ನು ನೀಡಬೇಕು ಎಂದು ಹೇಳಿದ ಅವರು, ನೇಮಕಾತಿ ಸಮಯದಲ್ಲಿ ಶೇ.3ರಷ್ಟು ಮೀಸಲಾತಿಗಳಿದ್ದು, ಈ ನಿಯಮಗಳನ್ನು ಸಡಿಲಗೊಳಿಸಿ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮುಂದಾಗಬೇಕು ಎಂದರು.
ಶಿಕ್ಷಕರ ವರ್ಗಾವಣೆಯಲ್ಲಿ ಅಂಗವಿಕಲ ಶಿಕ್ಷಕರಿಗೆ ಒಂದೇ ಕಡೆ ಮೂರು ವರ್ಷ ಕಾರ್ಯನಿರ್ವಹಿಸಬೇಕೆಂಬ ನಿಯಮದಿಂದ ವಿನಾಯ್ತಿ ನೀಡಲಾಗಿದೆ. ಆದರೆ, ಇಲಾಖೆ ಆದೇಶವನ್ನು ಪಾಲಿಸುತ್ತಿಲ್ಲ ಎಂದು ತಿಳಿಸಿದ ಅವರು, ಗುಲ್ಬರ್ಗಾ ಸೇರಿದಂತೆ ಕೆಲವು ಕಡೆ ಈ ವಿಚಾರದಲ್ಲಿ ಅನ್ಯಾಯ ಮಾಡಲಾಗಿದೆ ಎಂದು ತಿಳಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಡಿ.28 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್‌ನಲ್ಲಿ ಅಂಗವಿಕಲ ನೌಕರರ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲೆಯ ಪ್ರತಿಯೊಬ್ಬ ಅಂಗವಿಕಲ ನೌಕರರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಕೆ.ಡಿ. ಶಿಡ್ಲಪ್ಪ, ದೇವರಾಜು, ಅಂದಪ್ಪ ಬೊಳರೆಡ್ಡಿ, ಭುಜಂಗಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement