ಚಿಕ್ಕಮಗಳೂರು ಅಭಿವೃದ್ಧಿಗೆ ಬದ್ಧ: ಆಸ್ಕರ್
ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿಗೆ ಬದ್ಧನಿದ್ದೇನೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಭರವಸೆ ನೀಡಿದ್ದಾರೆ.
ಚಿಕ್ಕಮಗಳೂರಿನ ಧರ್ಮಕ್ಷೇತ್ರದ ಆವರಣದಲ್ಲಿ ಭಾನುವಾರ ಸಂಜೆ ನಡೆದ ಧರ್ಮಕ್ಷೇತ್ರದ ಸುವರ್ಣ ಮಹೋತ್ಸವ ಹಾಗೂ ವಿಶ್ವಾಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲಾ ರೀತಿಯಲ್ಲಿ ಅವರ ಭುಜಕ್ಕೆ ಭುಜಕ್ಕೊಟ್ಟು ಕೆಲಸ ಮಾಡುತ್ತೇನೆ. ನಾನು ಈ ಕ್ಷೇತ್ರದ ಸಂಸದರಲ್ಲದಿದ್ದರೂ, ಇದು, ನನ್ನ ಕ್ಷೇತ್ರವೆಂದು ಭಾವಿಸಿ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಆಗಬೇಕಾಗಿರುವ ಅಭಿವೃದ್ಧಿ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.
ಕಳೆದ ವಾರ ಚಿಕ್ಕಮಗಳೂರನಲ್ಲಿ ರೈಲ್ವೆಯನ್ನು ಉದ್ಘಾಟಿಸಲಾಯಿತು. ಇಲ್ಲಿಗೆ ರೈಲು ಬರಬೇಕೆಂಬುದು ಇಂದಿರಾಗಾಂಧಿಯವರ ಕನಸಾಗಿತ್ತು. ಇದು, ಇದೀಗ ನನಸಾಗಿದೆ. ಇದರ ಹಿಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವರ ಪರಿಶ್ರಮವಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಧರ್ಮಕ್ಷೇತ್ರದಲ್ಲಿ ಕನ್ನಡದಲ್ಲೇ ಪ್ರಾರ್ಥನೆ ಮಾಡಲಾಗುತ್ತಿದೆ. ಇದೊಂದು ಹೆಮ್ಮೆಯ ಸಂಗತಿ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿದರು.
ಕ್ರೈಸ್ತರ ಉಪೇಕ್ಷೆ: ರಾಜಕೀಯ ಮತ್ತು ಆಡಳಿತ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯ ಉಪೇಕ್ಷಿಸಲಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಕರ್ನಾಟಕ ಕ್ರೈಸ್ತ ಒಕ್ಕೂಟಗಳ ಅಧ್ಯಕ್ಷ ರೊನಾಲ್ಡ್ ಕೊಲಾಸೊ ವಿಷಾದ ವ್ಯಕ್ತಪಡಿಸಿದರು.
ಕ್ರೈಸ್ತ ಸಂಸ್ಥೆಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡುತ್ತಿವೆ. ಈ ಸೇವೆ ಕೇವಲ ಒಂದು ಜಾತಿ, ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ವರ್ಗದವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಈ ಸೇವಾ ಕಾರ್ಯದಲ್ಲಿ ತೊಡಗಿವೆ ಎಂದು ಹೇಳಿದರು.
ಈ ದೇಶದಲ್ಲಿ ಕ್ರೈಸ್ತರು ಅಲ್ಪಸಂಖ್ಯಾತರು. ಹಾಗಿದ್ದರೂ ಸಮಾಜ ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಹಲವು ಕ್ಷೇತ್ರಗಳಿಗೆ ತಮ್ಮದೆಯಾದ ಕೊಡುಗೆ ನೀಡಿದೆ ಎಂದರು.
ಕ್ರೈಸ್ತ ಸಂಸ್ಥೆಗಳ ಶಾಲೆ, ಕಾಲೇಜುಗಳಲ್ಲಿ ಶಿಕ್ಷಣ ಪಡೆದಿರುವ ಹಲವು ಮಂದಿ ಉನ್ನತ ಹುದ್ದೆಗಳಿಗೆ ಹೋಗಿದ್ದಾರೆ. ಆದರೆ, ಕ್ರೈಸ್ತ ಸಮುದಾಯದವರು ಮಾತ್ರ ಉನ್ನತ ಹುದ್ದೆ ಪಡೆಯಲು ಆಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಅವಕಾಶ ಇಲ್ಲ: ಭಾರತ ದೇಶದಲ್ಲಿ ಎಲ್ಲಾ ಧರ್ಮದವರಿಗೆ ತಮ್ಮ ತಮ್ಮ ಧರ್ಮದ ಬಗ್ಗೆ ಪ್ರಚಾರ ಮಾಡಲು ಅವಕಾಶ ಇದೆ. ಆದರೆ, ಕ್ರೈಸ್ತ ಧರ್ಮದ ಬಗ್ಗೆ ಪ್ರಚಾರ ಮಾಡಲು ಮುಕ್ತ ಅವಕಾಶ ಇಲ್ಲದಂತಾಗಿದೆ. ಪ್ರಚಾರಕ್ಕೆ ಮುಂದಾದ ಸಂದರ್ಭದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪ ಹೊರಿಸಿ, ಅವರ ಮೇಲೆ ಹಲ್ಲೆ ನಡೆಸುವುದಲ್ಲದೆ, ಚರ್ಚ್‌ಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದರು.
ಚಿಕ್ಕಮಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ. ಟಿ. ಅಂತೋಣಿ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಬೆಳಗಾವಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಫಿಟರ್ ಮಚಾದೋ, ಫಾ. ಚಾರ್ಲ್ಸ್ ಪಿರೇರಾ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪತ್ನಿ ಬ್ಲಾಜಂ ಉಪಸ್ಥಿತರಿದ್ದರು. ಚಿಕ್ಕಮಗಳೂರು ಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಜಾರ್ಜ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.