ದಲಿತ ವಿರೋಧಿ ನೀತಿ: ಪ್ರತಿಭಟನೆ
ಚಿಕ್ಕಮಗಳೂರು: ತಾಲೂಕಿನ ಬೈಗೂರು ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ಆರೋಪಿಸಿ ಸಿಪಿಐ ಕಾರ್ಯಕರ್ತರು ಬುಧವಾರ ತಾಲೂಕು ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದರು.ಸಿಪಿಐ ತಾಲೂಕು ಕಾರ್ಯದರ್ಶಿ ಕೆ.ಎನ್. ಕಲ್ಲೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೈಗೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸದಾ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ಈ ಗ್ರಾಮದಲ್ಲಿ ದಲಿತರಿಗೆ ಸಿಗಬೇಕಾದ ಸವಲತ್ತುಗಳನ್ನು ಮೊಟಕುಗೊಳಿಸಿದ್ದಾರೆ. ಸರ್ಕಾರದಿಂದ ಬಂದ ಸವಲತ್ತುಗಳ ಬಗ್ಗೆ ಗ್ರಾಮ ಸಭೆಯಲ್ಲಿ ಮಾಹಿತಿಯನ್ನು ನೀಡುತ್ತಿಲ್ಲ. ಈ ಕುರಿತು ಪ್ರಶ್ನಿದರೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಬೈಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕೆರೆಮಕ್ಕಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವ ದೇವರಾಜು ಎಂಬುವವರು ಕಳೆದ 10 ವರ್ಷಗಳಿಂದ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ದೂರುಗಳು ಬಂದಿಲ್ಲ. ಆದರೂ ಸಹ ಅವರನ್ನು ಬದಲಾಯಿಸಿ, ಬೇರೆಯವರನ್ನು ನೀರುಗಂಟಿಯನ್ನಾಗಿ ನೇಮಕ ಮಾಡಲಾಗಿದೆ. ಇದು, ಕಾನೂನು ಬಾಹಿರ ಮತ್ತು ದಲಿತ ವಿರೋಧಿ ನೀತಿಯಾಗಿದೆ. ಈ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದರು.