ಗೋರಖ್ ಸಿಂಗ್ ವರದಿ ಅನುಷ್ಠಾನಕ್ಕೆ ಆಗ್ರಹ
ಶೃಂಗೇರಿ: ಗೋರಖ್ ಸಿಂಗ್ ವರದಿ ಯಥಾವತ್ ಅನುಷ್ಟಾನ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಾಲೂಕು ರೈತ ಸಂಘ ಸೋಮವಾರ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ಆಯೋಜಿಸಿದೆ.
ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡಬೇಕು, ಬ್ಯಾಂಕುಗಳಿಂದ ರೈತರಿಗೆ ಆಗುತ್ತಿರುವ ಕಿರುಕುಳ ನಿಲ್ಲಿಸಬೇಕು ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು.
ಇದೇ ಸಂದರ್ಭಲ್ಲಿ ಬೆಳಗಾವಿ ಅಧಿವೇಶದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಧರಣಿ ನಿರತ ಕಬ್ಬುಬೆಳೆಗಾರ ರೈತ ವಿಠಲ್ ಅರೆಬಾವಿರವರರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಧರಣಿ ಸತ್ಯಾಗ್ರಹ ನಡೆಯಲಿದೆ. ನಂತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.
ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂದವರು ಈ ಧರಣಿಸತ್ಯಾಗ್ರಹದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ತಾಲೂಕು ರೈತ ಸಂಘದ ಅಧ್ಯಕ್ಷ ಟಿ.ಕೆ. ಗೋಪಾಲ್ ನಾಯಕ್ ತೊರೊಳ್ಳಿ ತಿಳಿಸಿದ್ದಾರೆ.