ರೋಗ ಹಾವಳಿ ತಡೆಗೆ ಸಹಕಾರ ಅಗತ್ಯ
ನರಸಿಂಹರಾಜಪುರ: ಬೇಸಿಗೆಯ ದಿನಗಳಲ್ಲಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆಯ ಜತೆಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಲಲಿತ ತಿಳಿಸಿದರು.
ಪಟ್ಟಣದ ಇಂದಿರಾ ನಗರದ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಗ್ರಾಮೀಣ ಆರೋಗ್ಯ ನೈರ್ಮಲ್ಯ ಸಮಿತಿಯ ಸದಸ್ಯರಿಗೆ ಆರೋಗ್ಯ ಇಲಾಖೆಯು ಹಮ್ಮಿಕೊಂಡಿದ್ದ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಮತ್ತು ಜಾಗೃತಿ ಶಿಬಿರದಲ್ಲಿ ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ವಾಂತಿ, ಭೇದಿ, ಕಾಲರಾ ರೋಗ ಆಗಿರುವ ಸಾಧ್ಯತೆಯೂ ಇದೆ. ಬೇಸಿಗೆಯ ದಿನಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರನ್ನು ಆರಿಸಿ ಕುಡಿಯಬೇಕು. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ವರ್ಷ ಕಟ್ಟಿನಮನೆಯಲ್ಲಿ ಒಬ್ಬರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಆ ಭಾಗದಲ್ಲಿ ಮಂಗನ ಕಾಯಿಲೆ ನಿಯಂತ್ರಣದಲ್ಲಿದೆ. ಆದರೂ ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆ ಅಗತ್ಯ ಎಂದರು.
ಆರೋಗ್ಯ ಇಲಾಖೆಯ ಶುಶ್ರೂಷಕಿ ಅನ್ನಮ್ಮ ಮಾತನಾಡಿ, ಸಾಂಕ್ರಾಮಿಕ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬರದಂತೆ ಜಾಗ್ರತೆ ವಹಿಸುವುದೇ ಸೂಕ್ತ ಎಂದರು.
ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರು ಸ್ವಚ್ಛತೆ ಬಗ್ಗೆ ಗಮನ ನೀಡಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆಯನ್ನು ಆಶಾ ಕಾರ್ಯಕರ್ತೆ ಆಶಾ ವಹಿಸಿದ್ದರು. ಅತಿಥಿಗಳಾಗಿ ಮುಖಂಡ ಗಿರಿರಾಜ್, ಅಂಗನವಾಡಿ ಕಾರ್ಯಕರ್ತೆ ಗಾಯಿತ್ರಿ, ಸಮಿತಿಯ ಸದಸ್ಯೆ ಅಶ್ವತ್ತಮ್ಮ, ಸುಮತಿ ಇದ್ದರು.