ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಮತದಾನ ಅಗತ್ಯ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಏ.10
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಹಾಗೂ ದೇಶದ ಸಮಗ್ರ ಅಭಿವೃದ್ಧಿ ಹೊಂದಲು ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಬಿ. ಕರುಣಾಕರ್ ಸಲಹೆ ನೀಡಿದರು.
ನಗರದ ಬಾಲಭವನದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಯೋಜನೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಮತದಾನ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.
ತಪ್ಪದೇ ಮತ ಚಲಾಯಿಸಿ: ಜಾಗೃತಿ ಮತದಾನದಿಂದ ನಾವು ಸುಭದ್ರ ಸರ್ಕಾರವನ್ನು ಪಡೆಯಲು ಸಾಧ್ಯ. ಮತದಾನ ಮಾಡುವುದು ನಮ್ಮ ಹಕ್ಕು ಹಾಗೂ ಕರ್ತವ್ಯವಾಗಿದೆ ಎಂದ ಅವರು, ಪ್ರತಿಯೊಬ್ಬ ನಾಗರಿಕರು ಏ.17 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಸಲಹೆ ನೀಡಿದರು.
ಚಿಕ್ಕಮಗಳೂರು ತಾಲೂಕಿನ 47 ಗ್ರಾಪಂ ಹಾಗೂ ನಗರದ 35 ವಾರ್ಡ್ ವ್ಯಾಪ್ತಿಯಲ್ಲಿ ಮತದಾನದ ಸಾಕ್ಷರತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಅವರನ್ನು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.
ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಯುವಕ ಯುವತಿಯರು ಹೆಚ್ಚು ಪ್ರಮಾಣದಲ್ಲಿ ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು ಎಂದರು.
ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಲಕ್ಷ್ಮಣ ನಾಯಕ್ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ್, ಶಿಶು ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.