ಪ್ರಜಾಪ್ರಭುತ್ವದಲ್ಲಿ ಮತದಾರನೇ ಪ್ರಭು
ಕ.ಪ್ರ.ವಾರ್ತೆ ಟಿ ತರೀಕೆರೆ ಟಿ ಏ.11
ಪ್ರಜಾಪ್ರಭುತ್ವದಲ್ಲಿ ಮತದಾನವು ಅತ್ಯಂತ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿ.ಪಂ.ಮುಖ್ಯ ಕಾರ್ಯದರ್ಶಿ ಕರುಣಾಕರ್ ತಿಳಿಸಿದ್ದಾರೆ.
ಅವರು, ಜಿಲ್ಲೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸಮೀಪದ ಕೆಂಚಾಪುರ ಗ್ರಾಮದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಬೇಕು. ಅತ್ಯಂತ ಕಡಿಮೆ ಮತದಾನವಾದ ಗ್ರಾಮಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮತದಾನ ಮಾಡಿ ದೇಶದ ಅಭಿವೃದ್ದಿಯಲ್ಲಿ ನಾವು ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ, ವಾರ್ತಾಧಿಕಾರಿ ಮಂಜುನಾಥ್ ಅವರು ಮಾತನಾಡಿ, ಏ. 17ರಂದು ಎಲ್ಲರೂ ತಪ್ಪದೇ ಮತದಾನ ಮಾಡಬೇಕು, ಸ್ವೀಪ್ ಸಮಿತಿ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಚಂದ್ರಶೇಖರ್ ಅವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾರನೇ ನಿರ್ಣಾಯಕ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಕಾಟಿನಗೆರೆ ರಂಗ ಪಯಣದ ಕಲಾ ತಂಡದ ಕಲಾವಿದರು, ಜಿಲ್ಲಾ ಸ್ವೀಪ್ ಸಮಿತಿಯ ನೀಲಕಂಠಪ್ಪ, ಸಮಿತಿ ಸದಸ್ಯರು, ಗ್ರಾಮಸ್ಥರು ಸಮಾರಂಭದಲ್ಲಿ ಭಾಗವಹಿಸಿದ್ದರು.