ಕುಡಿಯುವ ನೀರು ಸಮಸ್ಯೆ: ಗ್ರಾಮಗಳ ಪಟ್ಟಿಗೆ ಸೂಚನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಫೆ.6
ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದ್ದಾರೆ.
ಸಾಮಾನ್ಯ ಕ್ರಿಯಾಯೋಜನೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ಸೇರ್ಪಡೆ ಮಾಡುವಂತೆ ತಿಳಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.
ಕಡೂರು ತಾಲೂಕು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ಸಮಿತಿಯ ಸಭೆಯಲ್ಲಿ 363.80 ಲಕ್ಷ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ಸದ್ಯದಲ್ಲೇ ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ಕ್ರಿಯಾಯೋಜನೆ: ಕಡೂರು ತಾಲೂಕಿನ ಜತೆಗೆ ತರೀಕೆರೆ ತಾಲೂಕಿನ ಶಿವನಿ, ಅಜ್ಜಂಪುರ, ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಅಂಬಳೆ ಭಾಗದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕುಡಿಯುವ ನೀರು ಒದಗಿಸಲು ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟರೆ ತಕ್ಷಣವೇ ಹಣ ಬಿಡುಗಡೆಯಾಗಲಿದೆ ಎಂದ ಅವರು, ಜಿಲ್ಲಾ ಪಂಚಾಯಿತಿಯಿಂದ ಕೊರೆಸಿದ ಬೋರ್‌ವೆಲ್‌ಗಳಲ್ಲಿ ನೀರು ಬರದೆ ಹೋದರೆ, ಹೊಲಗಳಲ್ಲಿರುವ ಖಾಸಗಿ ಬೋರ್‌ವೆಲ್‌ಗಳಿಂದ ದಿನಕ್ಕೆ ಎರಡು ಗಂಟೆಗಳ ಕಾಲ ನೀರನ್ನು ಗ್ರಾಮಗಳಿಗೆ ಸರಬರಾಜು ಮಾಡಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಹೊಲಗಳಿಗೆ ನೀರು ಹರಿಸಲು ಅತಿ ಹೆಚ್ಚು ವಿದ್ಯುತ್ ಬಳಕೆಯಾಗಲಿದೆ. ಸಮರ್ಪಕ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.
ಬಸ್ ನಿಲ್ದಾಣ: ನಗರದ ಮಲ್ಲಂದೂರು ರಸ್ತೆಯಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಗೊಂಡಿದೆ. ಆದರೆ, ಅದರ ಬಳಕೆ ಮಾತ್ರ ಆಗುತ್ತಿಲ್ಲ. ಈ ಸಂಬಂಧ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಿ ಈ ಬಸ್ ನಿಲ್ದಾಣದ ಬಳಕೆಗೆ ಸದ್ಯದಲ್ಲೇ ಮುಂದಾಗಲಾಗುವುದು. ಅದೇ ರೀತಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಜೈಲಿಗೆ ಸೇರಿದ ಖಾಲಿ ಜಾಗ ಇದ್ದು, ಅದನ್ನು ಮುಂದಿನ ದಿನಗಳಲ್ಲಿ ಬಳಕೆ ಮಾಡಲು ಕ್ರಮ ವಹಿಸಲಾಗುವುದು. ಅದಕ್ಕೂ ಮುನ್ನ ಆ ಸ್ಥಳವನ್ನು ಸ್ವಚ್ಛಗೊಳಿಸಲಾಗುವುದು ಎಂದು ತಿಳಿಸಿದರು.
ಮರಳು ಡಿಪೋ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಬಂದಿದೆ. ಮೂಡಿಗೆರೆಯಲ್ಲಿ ಮರಳು ಡಿಪೋ ತೆರೆಯಲಾಗಿದ್ದು, ಬೇಡಿಕೆಗಿಂತ ಪೂರೈಕೆ ಹೆಚ್ಚಳವಾಗಿದೆ. ಸದ್ಯ ಜಿಲ್ಲೆಯಲ್ಲಿ ಮರಳಿನ ಕೊರತೆ ಇಲ್ಲ ಎಂದು ಹೇಳಿದರು.