ವಿದ್ಯಾರ್ಥಿಗಳ ಕರ್ನಾಟಕ ದರ್ಶನಕ್ಕೆ ಚಾಲನೆ
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಕರ್ನಾಟಕ ದರ್ಶನ ನೂತನ ಕಾರ್ಯಕ್ರಮದಡಿ ನಾಡಿನ ಐತಿಹಾಸಿಕ ಸ್ಥಳಗಳ ಸಂದರ್ಶನಕ್ಕಾಗಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ 200 ವಿದ್ಯಾರ್ಥಿಗಳು ಮಂಗಳವಾರ ನಗರದಿಂದ 5 ದಿನಗಳ ಪ್ರವಾಸಕ್ಕಾಗಿ ತೆರಳಿದರು.
ಜಿಲ್ಲಾ ದರ್ಶನ ಕಾರ್ಯಕ್ರಮದಡಿ ಈ ಹಿಂದೆ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳನ್ನು ಜಿಲ್ಲೆಯ ಐತಿಹಾಸಿಕ ಸ್ಥಳಗಳಿಗೆ ಪ್ರವಾಸಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ಬಾರಿ ರಾಜ್ಯ ಸರ್ಕಾರ ಕರ್ನಾಟಕ ದರ್ಶನ ಕಾರ್ಯಕ್ರಮವನ್ನು ಜಾರಿಗೆ ತಂದು ಅದನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ವಿಸ್ತರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಈ ಪ್ರವಾಸವನ್ನು ಆಯೋಜಿಸಿತ್ತು.
ಪ್ರವಾಸಕ್ಕೆ ತೆರಳುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ನಗರಕ್ಕಾಗಮಿಸಿ ತಂಗಿದ್ದ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಉಚಿತ ಬ್ಯಾಗ್, ನೋಟ್ ಬುಕ್, ಟೀಶರ್ಟ್, ಚಿತ್ರ ಬಿಡಿಸುವ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ, ನೂತನ ಕಾರ್ಯಕ್ರಮದಡಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ 900 ಮತ್ತು ತಾಲೂಕಿನ 200 ವಿದ್ಯಾರ್ಥಿಗಳನ್ನು ರಾಜ್ಯದ ಐತಿಹಾಸಿಕ ಸ್ಥಳಗಳಾದ ಚಿತ್ರದುರ್ಗ, ಬಳ್ಳಾರಿ, ಹೊಸಪೇಟೆ, ಹಂಪೆ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬಿಜಾಪುರ ಮತ್ತು ಕೂಡಲಸಂಗಮಕ್ಕೆ ಸಂಪೂರ್ಣ ಉಚಿತವಾಗಿ ಕರೆದೊಯ್ಯ ಲಾಗುತ್ತಿದೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಪ್ರಕಾಶ್ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.