ಪರಿಶಿಷ್ಟರಿಗೆ ಸರ್ಕಾರ ರಾಜಕೀಯ ಪ್ರಾತಿನಿಧ್ಯ ನೀಡಲಿ
ಕಡೂರು: ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಎಲ್ಲ ರೀತಿಯ ಸವಲತ್ತು ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದ್ದು, ಈಗಿನ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ನಾರಾಯಣಸ್ವಾಮಿ ಒತ್ತಾಯಿಸಿದರು.
ಪಟ್ಟಣದಲ್ಲಿ ದೇವಾಲಯದ ಸಮಾರೋಪ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವರು ಹಾಗೂ ಶ್ರೀ ಬಸವಮೂರ್ತಿ ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕಾರ್ಯಕರ್ತರು ಸ್ವಾಗತಿಸಿದ ಸಂದರ್ಭ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮಾಜ ಅಭಿವೃದ್ಧಿಗೆ ಶ್ರಮಿಸಿ: ರಾಜ್ಯದಲ್ಲಿ ಕಳೆದ ಬಾರಿ ಆಡಳಿತ ನಡೆಸಿದ ನಮ್ಮ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮುಖೇನ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಸೇರಿದಂತೆ ನಮ್ಮ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲ ರೀತಿಯ ಪ್ರಾತಿನಿಧ್ಯ ನೀಡಿ ಜನಾಂಗವನ್ನು ಮೇಲೆತ್ತುವ ಕೆಲಸ ಮಾಡಲಾಯಿತು. ಇದೀಗ ರಾಜಕೀಯ ಪ್ರಾತಿನಿಧ್ಯ ನೀಡುವ ಅವಶ್ಯಕತೆಯಿದೆ. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ನೀಡಿ ಸಮಾಜದ ಉತ್ತಮ ವ್ಯಕ್ತಿಗಳಿಗೆ ಟಿಕೆಟ್ ನೀಡುವ ಮುಖೇನ ರಾಜಕೀಯ ಸೇರಿದಂತೆ ಎಲ್ಲ ರೀತಿಯ ಪ್ರಾತಿನಿಧ್ಯ ನೀಡುವ ಕೆಲಸವನ್ನು ಬಿಜೆಪಿ ಸೇರಿದಂತೆ ಕಾಂಗ್ರೆಸ್ ಸರ್ಕಾರ ಕೂಡ ಮಾಡಬೇಕು. ಸಮಾಜದ ಬೆಳವಣಿಗೆಗೆ ಎಲ್ಲರೂ ಶ್ರಮಿಸಬೇಕು ಎಂದರು.
ಬೆಂಬಲ: ಚಿತ್ರದುರ್ಗದ ಶ್ರೀಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀಬಸವಮೂರ್ತಿ ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ನಮ್ಮ ಸಮಾಜವು ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಗಾಗಿ, ನಮ್ಮ ಜನಾಂಗದ ಉತ್ತಮ ವ್ಯಕ್ತಿಗಳಿಗೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಟಿಕೆಟ್ ನೀಡಿದರೆ ಬೆಂಬಲಿಸಲಾಗುವುದು. ಕಳೆದ ಭಾರಿ ಈ ಎರಡೂ ಪಕ್ಷಗಳು ನಮ್ಮ ಜನಾಂಗಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಈ ಬಾರಿ ಎರಡೂ ಪಕ್ಷಗಳು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸರ್ವೆ ನಡೆಸಿ ಉತ್ತಮ ಅಭ್ಯರ್ಥಿಗಳನ್ನು ಗುರುತಿಸಿ ಟಿಕೆಟ್ ನೀಡಬೇಕು. ಯಾವ ಪಕ್ಷ ಟಿಕೆಟ್ ನೀಡುತ್ತದೋ ಆ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದರು.
ಗಮನಹರಿಸಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಜನಾಂಗದ ವ್ಯಕ್ತಿಗೆ ಟಿಕೆಟ್ ನೀಡಿದಲ್ಲಿ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ನಮ್ಮ ಜನಾಂಗವು ಆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ಮಾಡಲಿದೆ. ಸದಾಶಿವ ಆಯೋಗದ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.34 ಭಾಗ ನಮ್ಮ ಜನಾಂಗವಿದೆ. ಈ ಕುರಿತು ರಾಷ್ಟ್ರೀಯ ಪಕ್ಷಗಳು ಗಮನಹರಿಸಬೇಕಿದೆ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎ.ಮಣಿ, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಚ್. ಶಂಕರ್, ತಾ.ಪಂ. ಸದಸ್ಯ ಆರ್. ಶಿವಕುಮಾರ್, ಪುರಸಭಾ ಸದಸ್ಯ ರಾಜೇಶ್, ಬಿಜೆಪಿ ಮುಖಂಡ ವರದರಾಜ್, ಗೋಪಿಕುಮಾರ್, ಶಿವಶಂಕರ್, ಬಂಕ್ ಮಂಜು, ರವಿಶಂಕರ್, ಕಂಡಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.