ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ದರ್ಗಾ ಅಪವಿತ್ರ: ರಾಜಕೀಯ ಬೇಡ

Lingaraj Badiger
Updated On : 2 Jan 2014, 11:12 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ.1
ಪ್ರಾರ್ಥನಾ ಮಂದಿರ ಅಪವಿತ್ರಗೊಳಿಸಿದ ವಿಷಯವಾಗಿ ನಡೆದ ಘರ್ಷಣೆಯನ್ನು ಜಿಲ್ಲೆಯ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ರಾಜಕೀಯಕ್ಕೆ ಬಳಸುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹೇಳಿದ್ದಾರೆ.
ಈ ವಿಷಯದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು, ಆಧಾರರಹಿತ ಆರೋಪ. ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಅವರು ಅವರ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಬುದ್ಧಿ ಹೇಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ವಿಕೃತ ಮನಸ್ಸಿನ ಕಿಡಿಗೇಡಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡಿ ದ್ವೇಷ ಹುಟ್ಟು ಹಾಕಲು ಈ ಘಟನೆಗೆ ಕಾರಣಕರ್ತರಾಗಿದ್ದಾರೆ. ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ.
ಕ್ರಮ ಕೈಗೊಳ್ಳಿ: ಈ ಘಟನೆ ಸಂಭವಿಸಿದ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಮುಂಬೈನಲ್ಲಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಚಿಕ್ಕಮಗಳೂರಿಗೆ ಆಗಮಿಸಿ ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೇ ವೇಳೆಯಲ್ಲಿ ಈ ಕೃತ್ಯಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಸಕಾಲದಲ್ಲಿ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಚಿಕ್ಕಮಗಳೂರಿನಲ್ಲಿ ನಡೆದ ಈ ಘಟನೆಯ ಬಗ್ಗೆ ಹಾಗೂ ಇಂತಹ ಅಹಿತಕರ ಘಟನೆ ಮರುಕಳಿದ ಹಾಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಇದರನ್ವಯ ಮುಖ್ಯಮಂತ್ರಿಯವರು ಈ ಕೃತ್ಯವನ್ನು ಎಸಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಘಟನೆಯ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ಜಿಲ್ಲಾಡಳಿತ ಅತ್ಯಂತ ಸಮರ್ಥ ರೀತಿಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಿ ಕ್ರಮ ತೆಗೆದುಕೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ರಜೆಯ ಮೇಲಿದ್ದರೂ ಹಾಸನ ಮತ್ತು ಉಡುಪಿಯಿಂದ ಅಧಿಕಾರಿಗಳು ಮತ್ತು ಪೊಲೀಸರನ್ನು ಕರೆಸಿ ಸಕಾಲದಲ್ಲಿ ಕ್ರಮ ಜರುಗಿಸಲಾಗಿದೆ. ಹಾಗೂ ಮುಂದೆ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ನಾಗರಾಜ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement