ಖಾಸಗೀಕರಣ ವಿರುದ್ಧ 10ರಂದು ಜಿಲ್ಲಾದ್ಯಂತ ಪ್ರತಿಭಟನೆ
ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜ. 10 ರಂದು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷೆ ಎಸ್.ಎಲ್. ರಾಧಾ ಸುಂದರೇಶ್ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರನ್ನಾಗಿ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಕ್ಕಳಿಗೆ ಅನೌಪಚಾರಿಕ ಶಾಲಾ ಪೂರ್ವ ಶಿಕ್ಷಣ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಮಾಹಿತಿ ಸೇವೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಜನ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಖಾಯಂಗೊಳಿಸಲು ಮುಂದಾಗದ ಸರ್ಕಾರಗಳು ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಗೊಳಿಸುವ ಹುನ್ನಾರದಲ್ಲಿ ನಿರತವಾಗಿವೆ ಎಂದು ಹೇಳಿದರು.
ಈಗಾಗಲೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಹಂತದಲ್ಲಿ ಹೋರಾಟ ನಡೆಸಿದ್ದು, ಕಳೆದ ಡಿ. 13 ರಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶ್ರೀಮತಿ ಕೃಷ್ಣತೀರ್ಥ ಅವರನ್ನು ಸಂಘಟನೆಯ ನಿಯೋಗ ಭೇಟಿ ಮಾಡಿ ಆಗ್ರಹಿಸಿತ್ತು ಎಂದು ಹೇಳಿದ್ದಾರೆ.