ಒತ್ತುವರಿ 2 ತಿಂಗಳಲ್ಲೇ ತೆರವುಗೊಳಿಸಿ; ಹೈ ಆದೇಶ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸೇರಿದಂತೆ ಸುತ್ತಮುತ್ತಲಿನ ಪಶ್ಚಿಮಘಟ್ಟದ ಅರಣ್ಯ ಪ್ರದೇಶದ ಒತ್ತುವರಿಯನ್ನು ಎರಡು ತಿಂಗಳಲ್ಲಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಒತ್ತುವರಿ ತೆರವಿಗೆ ಹೆಚ್ಚಿನ ಕಾಲಾವಕಾಶ ಕೋರಿ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಲು ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ನಿರಾಕರಿಸಿದೆ.
ಪಶ್ಚಿಮಘಟ್ಟದ ಸುಮಾರು 6 ಸಾವಿರ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಒತ್ತುವರಿ ತೆರವುಗೊಳಿಸುವಂತೆ 2012ರಲ್ಲೇ ಆದೇಶಿಸಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿತ್ತು. ಆದರೆ, ಅದನ್ನು ಜಾರಿಗೊಳಿಸದ ಸರ್ಕಾರ, ತೆರವಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು.
ಆದರೆ, ಇದನ್ನು ಪರಿಗಣಿಸದ ಪೀಠ, ಇಲ್ಲಿಯವರೆಗೆ ಎಷ್ಟು ಕ್ರಮ ತೆಗೆದುಕೊಂಡಿದ್ದೀರಿ ಎಂಬುದರ ಮಾಹಿತಿ ನೀಡಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ತಾವು ಈಗಾಗಲೇ 1,700 ಎಕರೆ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ್ದೇವೆ ಎಂಬ ಸರ್ಕಾರದ ವಾದವನ್ನು ಪರಿಗಣಿಸಲು ಸರ್ಕಾರ ನಿರಾಕರಿಸಿತು. ಅಲ್ಲದೆ, ಮುಂದಿನ ಎರಡು ತಿಂಗಳಲ್ಲಿ ಒತ್ತುವರಿ ತೆರವುಗೊಳಿಸುವಂತೆ ಆದೇಶಿಸಿತು.