ತಾಲೂಕು ಮಟ್ಟದ ಕಲಿಕೋತ್ಸವ ಇಂದು
ಶೃಂಗೇರಿ: ತಾಲೂಕಿನ ವಿದ್ಯಾರಣ್ಯಪುರ ಪಂಚಾಯಿತಿ ವಿದ್ಯಾರಣ್ಯಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಗುರುವಾರ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಡಿ.ಎನ್. ಜೀವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಯುವಜನ ಮತ್ತು ಕ್ರೀಡೆ ಹಾಗೂ ಮೀನುಗಾರಿಕಾ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಸಂಸದ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಗಾಯಿತ್ರಿ ಶಾಂತೇಗೌಡ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಾರದಾ ವಿಶ್ವನಾಥ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಶೃಂಗೇರಿ: ಪಟ್ಟಣದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆಯ ವೇಳೆ ನಡೆದಿದೆ.
ರಾಜಾನಗರ ನಿವಾಸಿ ರವೀಂದ್ರ ಕಾಮತ್ (37) ಸಂಜೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿ ಅವಿವಾಹಿತನಾಗಿದ್ದು, ಜೀವನದಲ್ಲಿ ಜಗುಪ್ಸೆಯೇ ಸಾವಿಗೆ ಕಾರಣ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.