ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಿ
ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಕಾಲಮಿತಿಯೊಳಗೆ ಕ್ರಿಯಾಯೋಜನೆಗಳನ್ನು ತಯಾರಿಸಿಕೊಂಡು ಅನುಷ್ಠಾನಗೊಳಿಸಿ ಉತ್ತಮ ಫಲಿತಾಂಶ ಪಡೆಯಲು ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಬೀಕನಹಳ್ಳಿಯ ವಿದ್ಯಾಭವನದಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಆಶ್ರಯದಲ್ಲಿ ಗುರುವಾರ ಸರ್ಕಾರಿ, ಅನುದಾನಿತ, ಮೊರಾರ್ಜಿ ವಸತಿ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಥಮ ಸ್ಥಾನ: ಪರೀಕ್ಷೆಗೆ ಇನ್ನು ಕೇವಲ 80 ದಿನಗಳು ಮಾತ್ರ ಬಾಕಿ ಇದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ, ಸರಣಿ ಕಿರುಪರೀಕ್ಷೆ, ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ಇನ್ನಿತರೆ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ನಡೆಸಿ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಅವರು ಸೂಚನೆ ನೀಡಿದರು. ಕ್ಲಿಷ್ಟಕರ ವಿಷಯಗಳಾದ ಗಣಿತ, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭ್ಯಾಸಕ್ಕೆ ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಬಿ. ರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಫಲಿತಾಂಶವನ್ನು ಉತ್ತಮಪಡಿಸುವಲ್ಲಿ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಮತ್ತು ಪರೀಕ್ಷಾ ಮಂಡಳಿಯಿಂದ ನೀಡಿರುವ ಸಲಹೆ ಸೂಚನೆಗಳನ್ನು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಶಿಕ್ಷಕರಿಗೆ ಮನನ ಮಾಡಿದರು.
ಕಾರ್ಯಾಗಾರದಲ್ಲಿ ಜಿಪಂ ಉಪ ಕಾರ್ಯದರ್ಶಿ (ಆಡಳಿತ) ರಾಜಗೋಪಾಲ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಲಕ್ಷ್ಮಣ ನಾಯ್ಕ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ, ಡಯಟ್ ಪ್ರಾಂಶುಪಾಲರಾದ ಬಸವೇಗೌಡ, ಶಿಕ್ಷಣಾಧಿಕಾರಿ ಸಿ.ಆರ್. ಪರಮೇಶ್ವರಪ್ಪ, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.