ಸೌಲತ್ತು ವಿತರಿಸಿ ಗುರಿ ಸಾಧಿಸಿ: ಶೇಖರಪ್ಪ
ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸಿಗುವ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ವಿತರಣೆಯಾಗುವ ಜತೆಗೆ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ.ಜಾತಿ, ಪ. ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೌರ್ಜನ್ಯದಲ್ಲಿ ನೊಂದ ಸಂತ್ರಸ್ತರಿಗೆ ತಕ್ಷಣ ಪರಿಹಾರಧನವನ್ನು ಸರ್ಕಾರದ ನಿಯಮಾನುಸಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ವಿವಿಧೆಡೆ ಶಾಲೆ, ದೇವಸ್ಥಾನ, ಪರಿಶಿಷ್ಟ ಕಾಲೋನಿಗಳ ಸಮೀಪ ಮದ್ಯದಂಗಡಿಗಳಿಗೆ ಅನುಮತಿ ನೀಡುತ್ತಿರುವ ಬಗ್ಗೆ ಚರ್ಚಿಸಿದ ಅವರು, ಅಂತಹ ಅಂಗಡಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ವಿವಿಧೆಡೆ ದಲಿತರು ಇರುವ ಜಮೀನು ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹರಿಸುವಂತೆ ಎಲ್ಲಾ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಅಂಬೇಡ್ಕರ್ ಭವನಗಳಿಗೆ ಇರುವ ತಾಂತ್ರಿಕ ಸಮಸ್ಯೆ ಹಾಗೂ ಹಣಕಾಸು ತೊಂದರೆಯ ಬಗ್ಗೆ ಪ್ರಸ್ತಾಪಿಸಿದಾಗ ಇದರ ನಿವಾರಣೆಗೆ ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಒತ್ತುವರಿ ಸಮಸ್ಯೆ ಹಾಗೂ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಗ್ರಾಮ ಹಾಗೂ ಸ್ಥಳಗಳನ್ನು ಗುರುತಿಸಿ ತುರ್ತಾಗಿ ಸೌಕರ್ಯ ಒದಗಿಸುವ ಭರವಸೆ ನೀಡಿದರು. ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರುಣಾಕರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯದ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಸ್ವಾಗತಿಸಿ, ವಂದಿಸಿದರು.