ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಸಮಾಜಕ್ಕೆ ಮಹಿಳೆ ಹೊರೆಯಲ್ಲ'

Mainashree
Updated On : 24 Jan 2014, 12:51 pm

ಚಿಕ್ಕಮಗಳೂರು: ಅನಕ್ಷರಸ್ಥರ ಜೊತೆಗೆ ಇಂದಿನ ವಿದ್ಯಾವಂತರೂ ಹೆಣ್ಣು ಸಮಾಜಕ್ಕೆ ಹೊರೆ ಎಂಬ ಭಾವನೆ ಹೊಂದಿದ್ದು, ಅದನ್ನು ಎಲ್ಲರೂ ಸೇರಿ ಹೋಗಲಾಡಿಸುವ ಅಗತ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ ಹೇಳಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನಗರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಪ್ತಾಹದ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗರ್ಭಪಾತದ ಮೂಲಕ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗಿರುವುದರಿಂದ ಇಂದು ಸಮಾಜದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗಿದೆ ಎಂದರು.
ಇದನ್ನು ಹೋಗಲಾಡಿಸುವ ಸಲುವಾಗಿ ಹೆಣ್ಣು ಸಮಾಜದ ಕಣ್ಣು ಎಂಬುದನ್ನು ಸಾರಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಜೊತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಎಲ್ಲ ಹಂತದಲ್ಲಿಯೂ ಅಧಿಕಾರ ನೀಡಲು ರಾಜಕೀಯದಲ್ಲಿಯೂ ಮೀಸಲಾತಿ ಕಲ್ಪಿಸಿದೆ ಎಂದು ಹೇಳಿದರು.
ಹೆಣ್ಣು ಮಕ್ಕಳಿಗೆ 12 ವರ್ಷದವರೆಗೂ ಉಚಿತ ಶಿಕ್ಷಣ ನೀಡಲು ಮುಂದಾಗಿರುವ ಸರ್ಕಾರ ಭಾಗ್ಯಲಕ್ಷ್ಮಿ ಯೋಜನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಮುಂದಾಗಿದೆ ಎಂದ ಅವರು, ಹೆಣ್ಣು ಭ್ರೂಣ ಹತ್ಯೆ ಕಾನೂನು ರೀತ್ಯ ಶಿಕ್ಷಾರ್ಹ ಅಪರಾಧವಾಗಿರುವುದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಇದನ್ನು ಅರ್ಥ ಮಾಡಿಕೊಂಡು ಭವಿಷ್ಯದ ಕುರಿತು ಎಚ್ಚರಿಕೆ ವಹಿಸಬೇಕೆಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಪ್ರೌಢಾವಸ್ಥೆಯಲ್ಲಿಯೇ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬಿ ಸರಿಯಾದ ಮಾರ್ಗದರ್ಶನ ನೀಡಿದರೆ ಶಿಶು ಹತ್ಯೆ ತಪ್ಪಿಸಬಹುದು ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಮಮತಾ, ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ತಿಮ್ಮಪ್ಪ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಮತ್ತು ಬಿತ್ತಿ ಪತ್ರ ರಚನಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಇಲ್ಲಿ ಆಯ್ಕೆಯಾದವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement