ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ

Rashmi Kasaragodu
Updated On : 18 Jul 2014, 11:29 am

ಚಿಕ್ಕಮಗಳೂರು: 14 ವರ್ಷ ಒಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ನಿಯೋಜಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು.
ಜಿಲ್ಲೆಯ ಕೆಲವು ಪಟ್ಟಣಗಳಲ್ಲಿ ಮಕ್ಕಳು ಬೆಳಗಿನ ಸಮಯದಲ್ಲಿ ಹಾಲು, ದಿನಪತ್ರಿಕೆ ವಿತರಣೆ ಹಾಗೂ ಸಂಜೆ ವೇಳೆಯಲ್ಲಿ ಕೈಗಾಡಿಗಳಲ್ಲಿ ತಿಂಡಿ ಮಾರುವ ಕೆಲಸದಲ್ಲಿ ತೊಡಗಿಸಿ ಕೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲಾ ಇಲಾಖೆಗಳು ಕೈಜೋಡಿಸಬೇಕೆಂದ ಅವರು, ದೂರುಗಳು ಇದ್ದಲ್ಲಿ ಸಾರ್ವಜನಿಕ ಸಹಾಯವಾಣಿ ಸಂಖ್ಯೆ 1098 ಅಥವಾ 08262- 230080 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.
ಮಕ್ಕಳ ಸಹಾಯವಾಣಿ ದೂರನ್ನು ಆಧರಿಸಿ ಶಿರವಾಸೆ ಗ್ರಾಮದಲ್ಲಿ ರಕ್ಷಿಸಿದ ಮಕ್ಕಳ ಬಗ್ಗೆ ಅವರ ಪೋಷಕರಿಗೆ ಮಾಹಿತಿ ನೀಡಬೇಕೆಂದ ಅವರು, ಈ ರೀತಿ ಮುಂದಿನ ದಿನದಲ್ಲಿ ಜಿಲ್ಲೆಯಲ್ಲಿ ಆಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಜೀತ ಪದ್ಧತಿ ಕುರಿತಂತೆ ಜಿಲ್ಲೆಯಲ್ಲಿ ಜೀವಿತ ಸಂಸ್ಥೆ ವತಿಯಿಂದ ಸಮೀಕ್ಷೆ ನಡೆಯುತ್ತಿದೆ ಎಂದ ಅವರು, ಜೀತ ಕಾರ್ಮಿಕರು ಸಮೀಕ್ಷೆಯಲ್ಲಿ ಕಂಡು ಬಂದಲ್ಲಿ ತ್ವರಿತಗತಿಯಲ್ಲಿ  ಅವರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ಸಹಾಯಕ ಕಾರ್ಮಿಕ ಆಯುಕ್ತ ಎ.ಸಿ. ತಮ್ಮಣ್ಣ, ತಾ. ತಹಸೀಲ್ದಾರ್ ಹಾಗೂ ಕಾರ್ಮಿಕ ಅಧಿಕಾರಿಗಳು  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement