4 ತಿಂಗಳಲ್ಲಿ ಡೀಮ್ಡ್ ಫಾರೆಸ್ಟ್ ವರದಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇರುವ ಡೀಮ್ಡ್ ಫಾರೆಸ್ಟ್ ಗುರುತಿಸಿ ನಾಲ್ಕು ತಿಂಗಳೊಳಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಾಲ್ಕು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಡೀಮ್ಡ್ ಫಾರೆಸ್ಟ್ ಗುರುತಿಸಲು ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ, ಜಿಲ್ಲಾ ಮಟ್ಟದಲ್ಲಿ ತಮ್ಮ ನೇತೃತ್ವದಲ್ಲಿ ಹಾಗೂ ವಿಭಾಗೀಯ ಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.
ನಗರ ಸಮೀಪದ ಕುರುವಂಗಿ ಬಳಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಕ್ಕೆ 30 ಎಕರೆ ಪ್ರದೇಶ ಗುರುತು ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಾದರಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಎಂದರು.
ಈ ಕಟ್ಟಡದಲ್ಲಿ ಸರ್ಕಾರದ 60 ಕಚೇರಿಗಳು ಒಂದೇ ಸೂರಿನಡಿ ಬರಲಿವೆ. ಈ ಸಂಬಂಧ ಈಚೆಗೆ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಈ ಕಟ್ಟಡದ ಅಂದಾಜು ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ಜಿಲ್ಲಾಧಿಕಾರಿಗಳ ಕಟ್ಟಡವನ್ನು ಪಾರಂಪರಿಕ ಕಟ್ಟಡವನ್ನಾಗಿ ಉಳಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಏರ್‌ರ್ಟ್ರ್ಸೀಫ್‌ಗಾಗಿ ಜಿಲ್ಲಾ ಕೇಂದ್ರದಲ್ಲಿ 100 ಎಕರೆ ಜಮೀನಿದ್ದು, ಇನ್ನು 14 ಎಕರೆ ಅವಶ್ಯಕತೆ ಇರುವುದರಿಂದ ಈ ಭೂಮಿಯನ್ನು ಸ್ವಾಧೀನಪಡಿಸಿ ಕೊಳ್ಳಬೇಕಾಗಿದೆ. ಈ ಕೆಲಸವನ್ನು ಹೌಸಿಂಗ್ ಬೋರ್ಡ್ ಏಜೆನ್ಸಿ ಮೂಲಕ ಕೈಗೆತ್ತಿಕೊಳ್ಳಲಾಗುವುದು. ಏರ್‌ರ್ಟ್ರ್ಸೀಫ್ ನಿರ್ಮಾಣದ ಮರುಪರಿಶೀಲನಾ ಅಂದಾಜು ಪಟ್ಟಿಯನ್ನು ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಹೌಸಿಂಗ್ ಬೋರ್ಡ್ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.