ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅತ್ಯಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ

Rashmi Kasaragodu
Updated On : 23 Jul 2014, 11:44 am

ಶೃಂಗೇರಿ: ರಾಜ್ಯದ ವಿವಿಧೆಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ಪಟ್ಟಣದ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಂಘಟನೆ ಕಾರ್ಯಕರ್ತರು ಕಾಲೇಜಿನ ಮುಖ್ಯದ್ವಾರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಮುಖ್ಯಬೀದಿಗಳಲ್ಲಿ ಸಾಗಿ ಗೌರೀಶಂಕರ ಸಭಾಂಗಣದಲ್ಲಿ ಸಮಾವೇಶಗೊಂಡರು. ರಾಜ್ಯ ಸರ್ಕಾರ ವಿಫಲಗೊಂಡಿದೆ.ಅತ್ಯಾಚಾರ್ ಹಠಾವೋ ದೇಶ್ ಬಚಾವೋ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಗೃಹ ಸಚಿವರು ಕೂಡಲೇ ರಾಜಿನಾಮೆ ನೀಡಲಿ ಇತ್ಯಾದಿ ಘೋಷಣೆಗಳನ್ನು ಕೂಗಿದರು.
ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಡಾ.ಲಕ್ಷ್ಮಿನರಸಿಂಹಪ್ರಸಾದ್ ರಾಜ್ಯದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇದೆ. ರಾಜ್ಯ ಸರ್ಕಾರ ಇದನ್ನು ನಿಯಂತ್ರಿಸುವಲ್ಲಿ ವಿಫಲಗೊಂಡಿದೆ. ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅತ್ಯಾಚಾರಿಗಳನ್ನು ಬಂಧಿಸಿ ಕ್ರಮ ತೆಗೆದುಕೊಳ್ಳವ ಬದಲು ಅತ್ಯಾಚಾರಿಗಳಿಗೇ ಸರ್ಕಾರ ರಕ್ಷಣೆ ನೀಡಲು ಹೊರಟಂತಿದೆ ಎಂದು ಆರೋಪಿಸಿದರು. ಆರೋಪಿಗಳು ಪ್ರಭಾವ, ಹಣದಿಂದ ಇಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಲೇ ಇದ್ದಾರೆ. ತನಿಖೆ ವಿಳಂಬವಾಗಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಕಾನೂನು ಕಾಯ್ದೆಗಳು ಸರಿಯಾಗಿ ಬಳಕೆಯಾಗುತ್ತಿಲ್ಲ. ತನಿಖೆಯ ದಿಕ್ಕು ತಪ್ಪುತ್ತಿದೆ.ರಾಜ್ಯ ಸರ್ಕಾರ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ತಹಸೀಲ್ದಾರ್ ಸಣ್ಣರಂಗಯ್ಯ ಮನವಿ ಸ್ವೀಕರಿಸಿದರು. ಶ್ರೇಯಸ್, ಪಾಲಚಂದ್ರ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement