ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹ
ಚಿಕ್ಕಮಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಬಹುಜನ ವಿದ್ಯಾರ್ಥಿ ಸಂಘ ಖಂಡಿಸಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಗೂಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿದೆ.
ಈ ರೀತಿಯ ಪ್ರಕರಣ ಮರುಕಳಿಸದಂತೆ ರಾಜ್ಯ ಸರ್ಕಾರ ಸೂಕ್ತ ಎಚ್ಚರಿಕೆ ವಹಿಸಬೇಕೆಂದು ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಎಂ.ಎನ್. ಚಿದಂಬರ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಅತ್ಯಾಚಾರಿಗಳನ್ನು ಬಂಧಿಸುವಲ್ಲಿ ಇದುವರೆಗೂ ಯಾವುದೇ ರೀತಿಯ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿಲ್ಲ. ಇದರಿಂದಾಗಿ ಇಂಥ ಪ್ರಕರಣಗಳು ಆಗಾಗ ಮರುಕಳಿಸುತ್ತಿವೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ದುರಾಡಳಿತದಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ರೀತಿಯ ಪರಿಸ್ಥಿತಿ ನಿರ್ಮಾಣಗೊಂಡಿದ್ದರೂ ರಕ್ಷಣೆಯ ವಿಷಯದಲ್ಲಿ ರಾಜ್ಯ ಸರ್ಕಾರ ಜನತೆಗೆ ಸುಳ್ಳು ಭರವಸೆ ನೀಡುತ್ತಿದೆ. ಸಂವಿಧಾನದಲ್ಲಿ ಪ್ರಜೆಗಳಿಗೆ ರಕ್ಷಣೆ ನೀಡಲು ಸೂಕ್ತ ಕಾನೂನುಗಳಿದ್ದರೂ ಅವುಗಳನ್ನು ಜಾರಿಗೆ ತರಲು ಸರ್ಕಾರ ಮೀನ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದ್ದಾರೆ.