ಅತ್ಯಾಚಾರ ಪ್ರಕರಣ ಖಂಡಿಸಿ ಸಖರಾಯಪಟ್ಟಣದಲ್ಲಿ ಪ್ರತಿಭಟನೆ
ಸಖರಾಯಪಟ್ಟಣ: ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕಡೂರು ತಾ. ಸಖರಾಯಪಟ್ಟಣದಲ್ಲಿ ಶುಕ್ರವಾರ ಕನ್ನಡ ಪರ ಸಂಘಟನೆಗಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪದವಿ ಪೂರ್ವ ಕಾಲೇಜು ಆವರಣದಿಂದ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕೆ.ಎಂ. ರಸ್ತೆಯ ಮೇಲೆ ಕೆಲ ಕಾಲ ಧರಣಿ ನಡೆಸಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಹುತೇಕ ಮುಖಂಡರು ನಿರಂತರ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಿಂದಾಗಿ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಒಂಟಿಯಾಗಿ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಇಲ್ಲದಿರುವುದರಿಂದಾಗಿ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಗ್ರ ಶಿಕ್ಷೆ ವಿಧಿಸುವಂತಹ ಕಾನೂನನ್ನು ಸರ್ಕಾರ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ರಸ್ತೆ ಮೇಲೆ ಧರಣಿ ನಡೆಸಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ನಾಡ ಕಚೇರಿಯ ಕಂದಾಯ ನಿರೀಕ್ಷಕ ಕೆ.ಎಸ್. ಶಿವರಾಂ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಎಸ್.ಎಸ್. ನಂದೀಶ್, ಜಯ ಕರ್ನಾಟಕದ ಗಣೇಶ್, ಸಾಮಾಜಿಕ ಕಾರ್ಯಕರ್ತ ಆನಂದನಾಯ್ಕ್, ಸೋಮು, ಚೇತನ, ಚಾರುಕೀರ್ತಿ, ನವೀನನಾಯ್ಕ್ ರಕ್ಷಿತ್, ರಮೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.