ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಎಂಇಎಸ್ ವರ್ತನೆ ಖಂಡಿಸಿ ಕರವೇ ಪ್ರತಿಭಟನೆ

Rashmi Kasaragodu
Updated On : 29 Jul 2014, 10:46 am

ಚಿಕ್ಕಮಗಳೂರು: ಬೆಳಗಾವಿಯಲ್ಲಿ ಪದೇ ಪದೇ ಪುಂಡಾಟಿಕೆ ಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸುವುದರ ಜೊತೆಗೆ ಆ ಸಂಘಟನೆಗಳ ಕಾರ್ಯಕರ್ತರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ವೇದಿಕೆ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮತ್ತು ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ರೇಣುಕಾ ಪರಮೇಶ್ ನೇತೃತ್ವದಲ್ಲಿ ಹಳೇ ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದ ಬಳಿ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತೇಗೂರು ಜಗದೀಶ್, ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿ ವಿಚಾರದಲ್ಲಿ ಪದೇ ಪದೇ ತರಲೆ ಮಾಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಹೇಳಿಕೆ ನೀಡುವ ಮೂಲಕ ಶಾಸಕ ಅರವಿಂದ್ ಪಾಟೀಲ್ ಮತ್ತು ಸಾಂಬಾಜೀ ಪಾಟೀಲ್ ನಾಡದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು. ಬೆಳಗಾವಿ ರಾಜ್ಯದ ಅವಿಭಾಜ್ಯ ಅಂಗ. ಅದು ಗಂಡು ಮೆಟ್ಟಿನನಾಡು. ಕಿತ್ತೂರು ಚೆನ್ನಮ್ಮನ ನೆಲೆಬೀಡಾಗಿರುವ ಅದನ್ನು ಯಾವುದೇ ಕಾರಣಕ್ಕೂ ಅತಿಕ್ರಮಿಸಲು ಬಿಡುವುದಿಲ್ಲ ಎಂದು ಹೇಳಿದ ಜಗದೀಶ್, ನಾಡದ್ರೋಹಿ ಹೇಳಿಕೆ ನೀಡಿರುವ ಸಾಂಬಾಜಿ ಪಾಟೀಲ್ ಮತ್ತು ಅರವಿಂದ್ ಪಾಟೀಲ್ ಅವರ ಶಾಸಕ ಸ್ಥಾನ ರದ್ದು ಮಾಡಬೇಕು. ಎಂಇಎಸ್ ಮತ್ತು ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸುವುದರ ಜೊತೆಗೆ ಆ ಸಂಘಟನೆಗಳ ಕಾರ್ಯಕರ್ತರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿದರು.ನಂತರ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಕಾರ್ಯದರ್ಶಿ ಪಂಚಾಕ್ಷರಿ, ಕಡೂರು ತಾ. ಉಪಾಧ್ಯಕ್ಷ ಎಸ್.ಎಸ್. ನಂದೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೋಟೆ ಮಲ್ಲೇಶ್, ಎಸ್.ಆರ್. ನಂದಿನಿ, ವಿನೋದಕುಮಾರ್, ನವೀನ್, ಶ್ರೀಧರ್ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement