ವಿಶ್ವ ಪರಿಸರ ದಿನಾಚರಣೆ: ಕಾಲ್ನಡಿಗೆ ಜಾಥಾ, ಸಸಿ ನೆಡುವ ಕಾರ್ಯಕ್ರಮ ಇಂದು
ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಪ್ರಾದೇಶಿಕ ಕಚೇರಿ) ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರ ನಗರದಲ್ಲಿ ಕಾಲ್ನಡಿಗೆ ಜಾಥಾ, ಸಸಿ ನೆಡುವ ಕಾರ್ಯಕ್ರಮ, ವಿದ್ಯಾರ್ಥಿಗಳಿಗಾಗಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಾಥಾವು ಬೆಳಿಗ್ಗೆ 9 ಗಂಟೆಗೆ ಹಳೇ ತಾಲೂಕು ಕಚೇರಿ ಆವರಣದಿಂದ ಪ್ರಾರಂಭಗೊಂಡು ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮುಕ್ತಾಯಗೊಳ್ಳಲಿದೆ. ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಚ್.ಎಸ್. ಕಮಲ ಹಾಗೂ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ನೆರವೇರಿಸಲಿದ್ದಾರೆ.
ಸಸಿ ನೆಡುವ ಕಾರ್ಯಕ್ರಮ, ವಿದ್ಯಾರ್ಥಿಗಳಿಗಾಗಿ ಅರಿವು ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಚ್.ಎಸ್. ಕಮಲ ಉದ್ಘಾಟಿಸಲಿದ್ದಾರೆ. ಉಪ ಪ್ರಾಚಾರ್ಯರಾದ ಡಿ.ಎನ್. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಸಂರಕ್ಷಣಾಧಿಕಾರಿ ಎನ್. ವೆಂಕಟೇಶನ್, ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್, ಬಿಇಒ ರಾಜೇಗೌಡ ಭಾಗವಹಿಸಲಿದ್ದಾರೆ. ಎಂ.ಎನ್. ಷಡಕ್ಷರಿ 'ಪರಿಸರ ಸಂರಕ್ಷಣೆ' ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ.