ಚಿಕ್ಕಮಗಳೂರು- ಬೆಂಗಳೂರು ಇಂಟರ್ಸಿಟಿ ರೈಲು ಸಂಚಾರ ಆರಂಭಿಸಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.9
ಚಿಕ್ಕಮಗಳೂರು- ಬೆಂಗಳೂರು ನಡುವೆ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಟಿ. ರವಿ ಕೇಂದ್ರ ರೈಲ್ವೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಚಿಕ್ಕಮಗಳೂರಿನಿಂದ ಬೇಲೂರು ಮೂಲಕ ಹಾಸನಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ತುರ್ತಾಗಿ ಸರ್ವೆ ಕಾರ್ಯ ನಡೆಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದರು.
ಕಡೂರು- ಚಿಕ್ಕಮಗಳೂರು- ಮೂಡಿಗೆರೆ ರಸ್ತೆ ಹಾಗೂ ಚಿಕ್ಕಮಗಳೂರು- ಬೇಲೂರು- ಹಾಸನ ರಸ್ತೆಗಳನ್ನು ಚತುಷ್ಪತ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಬೇಕು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಜೈರಾಮ್ ಗಡ್ಕರಿಯವರಿಗೆ ಈ ಕುರಿತು ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಾಫಿ ಮತ್ತು ಅಡಿಕೆ ತೋಟಗಳಲ್ಲಿ ಕೆಲಸ ನಿರ್ವಹಿಸುವ ಲಕ್ಷಾಂತರ ಜನ ಕೂಲಿ ಕಾರ್ಮಿಕರಿದ್ದು, ಅವರಿಗೆ ಉತ್ತಮ ವೈದ್ಯಕೀಯ ಸವಲತ್ತು ನೀಡುವ ದೃಷ್ಟಿಯಿಂದ ಚಿಕ್ಕಮಗಳೂರಿನಲ್ಲಿ ಇಎಸ್ಐ ಆಸ್ಪತ್ರೆ ತೆರೆಯುವಂತೆ ಕೇಂದ್ರ ಕಾರ್ಮಿಕ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದು ಬೇಡಿಕೆ ಈಡೇರಿಸುವಂತೆ ಕೋರಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ: ವಿಶ್ವ ವಿಖ್ಯಾತ ಪ್ರವಾಸಿ ತಾಣಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪಿಸಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ಹಾಗೂ ಜಿಲ್ಲೆಗೆ ಐ.ಟಿ., ಬಿ.ಟಿ. ಉದ್ದಿಮೆಗಳನ್ನು ಸೆಳೆಯಲು ಅನುಕೂಲ ಮಾಡಿಕೊಡುವಂತೆ ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಜಿ.ಎಂ. ಸಿದ್ದೇಶ್ವರರವರಿಗೆ ಪತ್ರ ಬರೆಯಲಾಗಿದೆ.
ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಹಾಗೂ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಲೋಕಸಭೆಯ ಜಂಟಿ ಅಧಿವೇಶನದ ಭಾಷಣದಲ್ಲಿ ದೇಶದ ಅಭಿವೃದ್ಧಿಗೆ ಹಲವು ಯೋಜನೆ ಪ್ರಕಟಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿ 100 ಹೊಸ ನಗರದಳ ನಿರ್ಮಾಣ, ಪುರ ಯೋಜನೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ರಾಷ್ಟ್ರೀಯ ಬಹು ಕೌಶಲ್ಯ ಯೋಜನೆ, ಪರಿಷ್ಕೃತ ಭೂ ಸುಧಾರಣಾ ಕಾಯ್ದೆ, ಹೊಸ ಆರೋಗ್ಯ ವಿಮೆ ಯೋಜನೆ, ವಿದೇಶಿ ನೇರ ಬಂಡವಾಳದಿಂದ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ವಕ್ತಾರ ಎಚ್.ಡಿ. ತಮ್ಮಯ್ಯ, ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ, ಮಧುಕುಮಾರ್ ಅರಸ್, ವೆಂಕಟೇಶ್ ಉಪಸ್ಥಿತರಿದ್ದರು.