ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂಗೆ ಒತ್ತಾಯ: ಸಚಿವ ಜಾರ್ಜ್

Vishwanath S
Updated On : 11 Jun 2014, 11:29 am

ಚಿಕ್ಕಮಗಳೂರು: ಕಳಸದ ಇನಾಂ ಭೂಮಿಯಲ್ಲಿ ವಾಸವಾಗಿರುವ ಜನರ ತೆರವಿಗೆ ಸಂಬಂಧ ನ್ಯಾಯಾಲಯಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಗುವುದು ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈ ವಿಚಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಸಚಿವ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪವಾದರೆ ಖಂಡಿತವಾಗಿಯೂ ಜನರ ಪರವಾಗಿ ಮಾತನಾಡುತ್ತೇನೆ ಎಂದರು.
ಮುಖ್ಯಮಂತ್ರಿಯವರು ಬಡವರ ಹಾಗೂ ರೈತರ ಪರವಾಗಿದ್ದಾರೆ. ಇನಾಂ ಭೂಮಿಯಲ್ಲಿ ವಾಸವಾಗಿರುವವರನ್ನು ತೆರವುಗೊಳಿಸಿದರೆ ಆಗಬಹುದಾದ ಅನಾನುಕೂಲದ ಬಗ್ಗೆ ರಾಜ್ಯ ಕಂದಾಯ ಸಚಿವರು ಹಾಗೂ ಅರಣ್ಯ ಸಚಿವರ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ತೆರವಿನ ಭೀತಿ: ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಮಾತನಾಡಿ, ಇನಾಂ ಭೂಮಿಯಲ್ಲಿ ವಾಸವಾಗಿರುವವರು ತೆರವಿನ ಭೀತಿ ಎದುರಿಸುತ್ತಿದ್ದಾರೆ. ಸರ್ಕಾರ ಇಲ್ಲಿನ ಜನರ ತೆರವಿಗೆ ಸಂಬಂಧಿಸಿದಂತೆ ರೈತರ ಪರವಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, 10 ಎಕರೆಗಿಂತ ಕಡಿಮೆ ಪ್ರಮಾಣದಲ್ಲಿ ಒತ್ತುವರಿ ಮಾಡಿಕೊಂಡಿರುವವರ ಪರವಾಗಿ ಸರ್ಕಾರ ನಿಲ್ಲಬೇಕು. ಇನಾಂ ಭೂಮಿಯಲ್ಲಿ ವಾಸವಾಗಿರುವ ಜನರ ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದರು ಹೇಳಿದರು.
ಇಲ್ಲಿನ ಜನರನ್ನು ಆತುರತುರವಾಗಿ ತೆರವುಗೊಳಿಸಬಾರದು. ಒತ್ತುವರಿದಾರರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಅರಣ್ಯ ಇಲಾಖೆಯವರಿಗೆ ಬೇರೆ ಭೂಮಿಯನ್ನು ನೀಡಿ, ಇಲ್ಲಿನ ಜನರಿಗೆ ಇದೇ ಭೂಮಿಯಲ್ಲಿ ಉಳಿಸಿಕೊಳ್ಳಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಗೃಹ ಸಚಿವರನ್ನು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement