ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪರಿಹಾರಕ್ಕೆ ಆಗ್ರಹಿಸಿ 28 ರಂದು ಮುಖ್ಯಮಂತ್ರಿ ಬಳಿಗೆ ನಿಯೋಗ

Rashmi Kasaragodu
Updated On : 25 Jun 2014, 11:01 am

ಕ.ಪ್ರ.ವಾರ್ತೆ, ಕಡೂರು, ಜೂ.24
ಮುಂಗಾರು ಕೈ ಕೊಟ್ಟು ತಾಲೂಕಿನ ರೈತರು ಸಂಕಷ್ಟದಲ್ಲಿ ಇರುವುದರಿಂದ ಸರ್ಕಾರ ರೈತರಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಘಟಕದಿಂದ ನಿಯೋಗ ತೆರಳಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ.ಬಿ.ಮಲ್ಲಿಕಾರ್ಜುನ್ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ.ಜಿ. ಶ್ರೀನಿವಾಸಮೂರ್ತಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ರೈತರು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ಮುಂಗಾರು ಮಳೆ ಸರಿಯಾಗಿ ಆಗದೇ ಅವರ ಶ್ರಮಕ್ಕೆ ಬೆಲೆ ಇಲ್ಲದಂತಾಗಿ ನಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜೂ.28 ಹಾಗೂ 29ರಂದು ಕಡೂರು, ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳಿಂದ ಬೆಂಗಳೂರಿಗೆ ನಿಯೋಗ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.
ರಸ್ತೆ ಬದಿಯಲ್ಲಿ ಅಳವಡಿಸಿರುವ ನೀರಿನ ಪೈಪುಗಳನ್ನು ತೆಗೆಯದೆ ಸರ್ಕಾರವು ರಸ್ತೆ ವಿಸ್ತರಣೆ ಕೈಗೊಳ್ಳಬೇಕು. ವರ್ಗಾವಣೆ ಸಹಜ ಪ್ರಕ್ರಿಯೆಯಾಗಿದೆ. ಸರಿಯಾಗಿ ಕಾರ್ಯನಿರ್ವಹಿಸದ ಸುಮಾರು 8 ಅಧಿಕಾರಿಗಳನ್ನು ಬದಲಾಯಿಸುವಂತೆ ಸಾರ್ವಜನಿಕವಾಗಿ ಶಿಫಾರಸು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕೆ.ಜಿ.ಶ್ರೀನಿವಾಸಮೂರ್ತಿ ಅವರ ಪಕ್ಷನಿಷ್ಠೆಗೆ ಮೆಚ್ಚಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಪ್ರಮುಖರು ನೇಮಿಸಿದ್ದಾರೆ. ಅವರು ಪಕ್ಷ ಸಂಘಟಿಸಿ ಉತ್ತಮ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.
ನೂತನ ಪ್ರಧಾನ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸಮೂರ್ತಿ ಕೃತಜ್ಞತೆ ಅರ್ಪಿಸಿ, ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಜಿ.ಪಂ ಮಾಜಿ ಅಧ್ಯಕ್ಷ ಕೆಂಪರಾಜು, ಜಿಲ್ಲಾ ಕಾಂಗ್ರೆಸ್‌ನ ಮಹೇಶ್ ಒಡೆಯರ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆನಂದ್, ಬೀರೂರು ಬ್ಲಾಕ್ ಅಧ್ಯಕ್ಷ ಕೆ.ಎಂ. ವಿನಾಯಕ್, ಮುಖಂಡರಾದ ಹರೀಶ್, ಅಜಯ್ ಒಡೆಯರ್, ಜಿಮ್ ಶ್ರೀನಿವಾಸ್, ಲೋಕೇಶ್, ಜಾವಿದ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement