ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ನಿಧನ
ಬೀರೂರು: ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಿ.ಎಂ. ಮಲ್ಲಿಕಾರ್ಜುನಯ್ಯ(75) ಶನಿವಾರ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಇವರು ಮೂರು ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ಸಂತಾಪ: ಡಿ.ಎಂ. ಮಲ್ಲಿಕಾರ್ಜುನಯ್ಯ ಅವರ ನಿಧನಕ್ಕೆ ಚಿತ್ರದುರ್ಗ ಸಂಸದರಾದ ಬಿ.ಎನ್. ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ಡಾ. ಬಿ.ಎಲ್. ಶಂಕರ್, ಎ.ಎನ್. ಮಹೇಶ್, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ಎಂ. ಲೋಕೇಶ್ ಇತರರು ಸಂತಾಪ ಸೂಚಿಸಿದ್ದಾರೆ.