ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕನಿಷ್ಠ ಕುಡಿವ ನೀರನ್ನಾದರೂ ಒದಗಿಸಿ

Lingaraj Badiger
Updated On : 6 Mar 2014, 10:47 am

ಚಿಕ್ಕಮಗಳೂರು:  ಸಮರ್ಪಕ ನೀರು ಸರಬರಾಜಿಗೆ ಒತ್ತಾಯಿಸಿ ಕಡೂರು ತಾಲೂಕಿನ ಬಾಣೂರಿನಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ದಿನೇಶ್ ಶಿವಪುರ ಅವರ ನೇತೃತ್ವದಲ್ಲಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಗ್ರಾ.ಪಂ. ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ಗ್ರಾಮಸ್ಥರು ಕನಿಷ್ಠ ಕುಡಿಯುವ ನೀರನ್ನಾದರೂ ತಕ್ಷಣ ಒದಗಿಸುವಂತೆ ಆಗ್ರಹಿಸಿದರು.
ಅಧಿಕಾರಿಗಳ ಜತೆ ವಾಗ್ವಾದ: ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಬಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ವಾಗ್ವಾದ ನಡೆಸಿದ ಗ್ರಾಮಸ್ಥರು, ಮಳೆ ಕೊರತೆ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮದ ಬೋರ್‌ವೆಲ್‌ಗಳು ಮತ್ತು ಬಾವಿಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಲ್ಲದೇ ಜನ ಜಾನುವಾರುಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.
ಗ್ರಾಮದಲ್ಲಿ ಹರಿಯುವ ವೇದಾವತಿ ಹಳ್ಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳದೇ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ ಗ್ರಾಮಸ್ಥರು 4- 5 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುತ್ತಿರುವುದರಿಂದಾಗಿ ಕುಡಿಯುವ ನೀರಿಗಾಗಿ ಮೈಲಿಗಟ್ಟಲೇ ಅಲೆದಾಡುವಂತಾಗಿದೆ ಎಂದು ದೂರಿದರು.
ಸ್ಥಳಕ್ಕಾಗಮಿಸಿದ ಸಖರಾಯಪಟ್ಟಣ ಠಾಣಾಧಿಕಾರಿ ಗಿರೀಶ್, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಬರುವವರೆಗೆ ತಾಳ್ಮೆ ವಹಿಸುವಂತೆ ಪ್ರತಿಭಟನಾಕಾರರ ಮನವೊಲಿಸಿದರು. ನಂತರ ಮನವಿ ಸ್ವೀಕರಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೂಕಪ್ಪಗೌಡ ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಗುರು, ವಿಜಯ್ ಕುಮಾರ್, ಲೋಕಣ್ಣ, ಗ್ರಾಮಸ್ಥರಾದ ಮಂಜುಳಾ, ಕಮಲಮ್ಮ, ಗುರುವಪ್ಪ, ಲೋಕೇಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement